ಶೀಘ್ರದಲ್ಲಿಯೇ ಗ್ರಾಮ ನ್ಯಾಯಾಲಯಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Update: 2023-10-02 12:38 GMT

ಬೆಂಗಳೂರು, ಅ.2: ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳನ್ನು ಶೀಘ್ರದಲ್ಲಿಯೇ ಸ್ಥಾಪಿಸುವ ಗುರಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ 2023ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರಪಿತ ಮಹಾತ್ಮಗಾಂಧಿಜೀ ಅವರು, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಸಹ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣ ಆಶಯ ಹೊಂದಿದ್ದರು.ಅದರಂತೆ ರಾಜ್ಯ ಸರಕಾರವು ಗ್ರಾಮ ನ್ಯಾಯಾಲಯಗಳ ಸ್ಥಾಪಿಸುವ ಚಿಂತನೆ ಇಟ್ಟುಕೊಂಡಿದ್ದು, ಇದರಿಂದ ಗ್ರಾಮಸ್ಥರಿಗೆ ಬಹಳ ಅನುಕೂಲ ಆಗುತ್ತದೆ ಎಂದು ಅವರು ತಿಳಿಸಿದರು.

ಮಹಾತ್ಮ ಗಾಂಧಿ ಅವರ ಕನಸಿನ ಅಧಿಕಾರ ವಿಕೇಂದ್ರೀಕರಣ ಮತ್ತು ಮಹಿಳಾ ಮೀಸಲಾತಿಗೆ ಮುನ್ನುಡಿ ಬರೆದವರು ರಾಜೀವ್ ಗಾಂಧಿ.ಜತೆಗೆ, ಅಧಿಕಾರ ವಿಕೇಂದ್ರಕರಣ ಗಾಂಧಿಯವರ ಕನಸಾಗಿತ್ತು. ಇದರಿಂದ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನಂಬಿದ್ದರು. ಹೀಗಾಗಿ ಗ್ರಾಮ ಸ್ವರಾಜ್ಯವನ್ನು ಪ್ರತಿಪಾದಿಸಿದರು ಎಂದು ಅವರು ಉಲ್ಲೇಖಿಸಿದರು.

ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್‍ಗಳಲ್ಲಿ ಶೇ.50ರಷ್ಟು ಮೀಸಲಾತಿ ಜಾರಿಗೆ ಕಾರಣ ಆದವರು ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ ಎಂದ ಅವರು, ಈಗ ಕೇಂದ್ರ ಸರಕಾರ ಜಾರಿ ಮಾಡಿದ್ದೀವಿ ಎಂದು ಹೇಳಿಕೊಳ್ಳುತ್ತಿರುವ ಮಹಿಳೆಯರ ರಾಜಕೀಯ ಮೀಸಲಾತಿಗೆ ಮುನ್ನುಡಿ ಬರೆದದ್ದು ಕಾಂಗ್ರೆಸ್ ಆಗಿದ್ದು,ಇದರಲ್ಲಿ ಹಿಂದುಳಿದ ವರ್ಗಗಳ ಮಹಿಳೆಯರಿಗೂ ಮೀಸಲಾತಿ ಕಲ್ಪಿಸಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹ್ಮದ್, ಗೋವಿಂದರಾಜು ಸೇರಿ ಹಲವು ಮುಖಂಡರು ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

233 ಗ್ರಾ.ಪಂಗಳಿಗೆ ಗಾಂಧಿ ಗ್ರಾಮ ಪುರಸ್ಕಾರ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪ್ರತಿ ವರ್ಷ ಗಾಂಧಿ ಜಯಂತಿ ದಿನದಂದು ನೀಡುವ ಗಾಂಧಿ ಗ್ರಾಮ ಪುರಸ್ಕಾರವೂ 233 ಗ್ರಾಮ ಪಂಚಾಯಿತಿಗಳಿಗೆ ಸಂದಿವೆ.

4 ಗ್ರಾಮ ಪಂಚಾಯಿತಿಗಳಿಗೆ ವಿಶೇಷ ಗಾಂಧಿ ಗ್ರಾಮ ಪುರಸ್ಕಾರ ಹಾಗೂ 15 ಸ್ವಚ್ಛ ಸರ್ವೇಕ್ಷಣ ಗ್ರಾಮಿಣ 2023 ರಾಜ್ಯ ಮಟ್ಟದ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನಿಸಿದರು.

ಖಾದಿ-ಗ್ರಾಮೋದ್ಯೋಗ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದು. ಜತೆಗೆ ಗ್ರಾಮೋದ್ಯೋಗ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.






 


 


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News