ಕಾರ್ಖಾನೆ ತಿದ್ದುಪಡಿ ಕಾಯ್ದೆ ವಾಪಸ್, ಕಾರ್ಮಿಕರ ಕೆಲಸ 8 ಗಂಟೆಗೆ ಇಳಿಕೆ:‌ ಸಿಎಂ ಸಿದ್ದರಾಮಯ್ಯ

Update: 2024-01-18 15:29 GMT

Photo: X/@CMofKarnataka

ಬೆಂಗಳೂರು: ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ಕಾಯ್ದೆ ಪರಿಶೀಲನೆ ನಡೆಸಿದ ಬಳಿಕ ಕಾರ್ಮಿಕರು 12 ಗಂಟೆ ಕೆಲಸ ಮಾಡುವ ಬದಲಾಗಿ ಮೊದಲಿನಂತೆ 8 ಗಂಟೆಗಳಿಗೆ ಇಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯೋಜನಾ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದ ಸಂಯುಕ್ತ ಹೋರಾಟ ವೇದಿಕೆಯ ಪದಾಧಿಕಾರಿಗಳು ಮತ್ತು ಮುಖಂಡರ ನಿಯೋಗದ ಜತೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ಮಸೂದೆ 2023 ರಡಿಯಲ್ಲಿ 12 ಗಂಟೆ ಕೆಲಸ ಮಾಡುವ ಕಾಯ್ದೆ ಕಡ್ಡಾಯವಾಗಿ ಆಗಬೇಕೆಂದು ಇಲ್ಲ. ಈ ಬಗ್ಗೆ ಪರಿಶೀಲಿಸಿ ಅದನ್ನು ವಾಪಸ್ಸು ಪಡೆದು ಮೊದಲಿನಂತೆ 8 ಗಂಟೆಗಳಿಗೆ ಇಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಬಲವಂತವಾಗಿ ರೈತರ ಸಾಲ ವಸೂಲಾತಿಯನ್ನು ಮಾಡಬಾರದೆಂದು ಸಹಕಾರಿ ಹಾಗೂ ರಾಷ್ಟ್ರೀಯ ಬ್ಯಾಂಕ್ ಗಳಿಗೆ ಸೂಚಿಸಲಾಗುವುದು. ಬಗರ್ ಹುಕುಂ, ಅಕ್ರಮ-ಸಕ್ರಮ, ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಉಪ ಮುಖ್ಯಮಂತ್ರಿಗಳು, ಕಂದಾಯ, ಅರಣ್ಯ, ಕೃಷಿ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು ಎಂದು ಅವರು ಭರವಸೆ ನೀಡಿದರು.

ಇನ್ನೂ, ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿಧಾನಪರಿಷತ್ತಿನಲ್ಲಿ ಅನುಮೋದನೆಯಾಗಿಲ್ಲ. ಜಂಟಿ ಸಮಿತಿಯಲ್ಲಿ ಇದಕ್ಕೆ ಅನುಮೋದನೆ ಪಡೆಯಲು ಕ್ರಮ ವಹಿಸಲಾಗುವುದು.ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ಮಸೂದೆ, 2023 ರಡಿ 12 ಗಂಟೆ ಕೆಲಸ ಮಾಡುವ ಕಾಯ್ದೆ ಕಡ್ಡಾಯವಾಗಿ ಆಗಬೇಕೆಂದು ಇಲ್ಲ. ಈ ಬಗ್ಗೆ ಪರಿಶೀಲಿಸಿ ಅದನ್ನು ವಾಪಸ್ಸು ಪಡೆದು ಮೊದಲಿನಂತೆ 8 ಗಂಟೆಗಳಿಗೆ ಇಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಭೂ ಸುಧಾರಣಾ ಕಾಯ್ದೆ 79 ‘ಎ’ ಹಾಗೂ ‘ಬಿ’ ಪರಿಚ್ಛೇಧಕ್ಕೆ ತಂದಿರುವ ತಿದ್ದುಪಡಿ ಸರಿಪಡಿಸುವ ಜತೆಗೆ, ಸರ್ಕಾರ ಕಾನೂನಾತ್ಮಕವಾಗಿ ಮಾಡಬಹುದಾದ ಎಲ್ಲ ಕ್ರಮವನ್ನು ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಿಎಂ ಸಲಹೆಗಾರ ಬಿ.ಆರ್.ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ, ರಾಜ್ಯ ರೈತ ಸಂಘದ ನಾಯಕರಾದ ಬಡಗಲಪುರ ನಾಗೇಂದ್ರ, ಚಾಮರಸ ಮಾಲಿ ಪಾಟೀಲ್, ಜೆ.ಎಂ.ವೀರಸಂಗಯ್ಯ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್, ಸಿಎಂ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಸೇರಿದಂತೆ ಪ್ರಮುಖರಿದ್ದರು.

‘ಭೂ ಸ್ವಾಧೀನ, ಗೋ ಹತ್ಯೆ ನಿಷೇಧ ಕಾಯ್ದೆ, ಬಗರ್ ಹುಕುಂ, ಕಾರ್ಮಿಕರಿಗೆ 12 ಗಂಟೆಗಳ ಕೆಲಸ ಕಡ್ಡಾಯ ಕಾಯ್ದೆ ನಿಷೇಧ, ಗ್ರಾಮೀಣ ಬ್ಯಾಂಕುಗಳಲ್ಲಿ ರೈತರ ಸಾಲಕ್ಕೆ ಒಟಿಎಸ್ ವ್ಯವಸ್ಥೆ ಫ್ರೀಡಂ ಪಾರ್ಕ್ ಅನ್ನು ಹೋರಾಟಗಳಿಗೆ ಮೀಸಲಿಡುವುದು ಸೇರಿದಂತೆ ಹಲವು ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಂಘದ ಸದಸ್ಯರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News