ಸಿಎಂ, ಡಿಸಿಎಂ ಭೇಟಿಯಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಸ್ಥರು: ಸಿಐಡಿ ತನಿಖೆಗೆ ಮನವಿ

Update: 2023-08-11 10:20 GMT

ಬೆಳಗಾವಿ, ಆ.11: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರವ ಆತ್ಮಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಅವರ ಕುಟುಂಬದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಕೆ ಮಾಡಿದ್ದಾರೆ. 

ಶುಕ್ರವಾರ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾದ ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ ಹಾಗೂ ತಾಯಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಮನವಿ ಸಲ್ಲಿಸಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ, 'ನನ್ನ ಪತಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಬಿ ರಿಪೋರ್ಟ್ ಸಲ್ಲಿಕೆಯಿಂದ ನಮಗೆ ಅನ್ಯಾಯ ಆಗಿದೆ. ಪ್ರಕರಣವನ್ನು ಸಿಬಿಐ ಇಲ್ಲವೇ ಸಿಐಡಿಗೆ ವಹಿಸಬೇಕು ಎಂದು ಸಿಎಂಗೆ ಮನವಿ ಮಾಡಿದ್ದೇವೆ. ಅವರು ಅದಕ್ಕೆ ಒಪ್ಪಿದ್ದಾರೆ' ಎಂದು ತಿಳಿಸಿದರು. 

ಸಂತೋಷ್ ಪಾಟೀಲ್ ಅವರ ತಾಯಿ ಪಾರ್ವತಿ ಮಾತನಾಡಿ, 'ನನ್ನ ಮಗನ ಆತ್ಮಹತ್ಯೆ ಪ್ರಕರಣದ ತನಿಖೆ ಸರಿಯಾಗಿ ನಡೆದಿಲ್ಲ. ಹಾಗಾಗಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸುವಂತೆ ಮನವಿ ಮಾಡಿದ್ದೇವೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದಾರೆ' ಎಂದು ಹೇಳಿದರು.

 

ಏನಿದು ಪ್ರಕರಣ?:

ಉಡುಪಿಯ ಶಾಂಭವಿ ಲಾಡ್ಜ್‍ನಲ್ಲಿ 2022ರ ಎಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಕಮೀಷನ್ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ವಿರುದ್ಧ ಆರೋಪ ಕೇಳಿಬಂದಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಳಿಕ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಪ್ರಕರಣದ ತನಿಖೆ ಬಳಿಕ ಮಾಜಿ ಸಚಿವ ಈಶ್ವರಪ್ಪಗೆ ಇತ್ತೀಚೆಗೆ ಕ್ಲೀನ್ ಚಿಟ್ ಸಿಕ್ಕಿತ್ತು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News