ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ ಆರೋಪ: ವಿಧಾನ ಪರಿಷತ್ ಸದಸ್ಯರೂ ಸೇರಿ 13 ಬಿಜೆಪಿ ನಾಯಕರ ವಿರುದ್ಧ ಎಫ್‍ಐಆರ್ ದಾಖಲು

Update: 2025-01-01 16:28 GMT

ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕಾರಣವೆಂದು ಆರೋಪಿಸಿ ಘೋಷಣೆ ಕೂಗಿ ಪೋಸ್ಟರ್ ಅಂಟಿಸಿದ ಆರೋಪದಡಿ ಮೂವರು ವಿಧಾನ ಪರಿಷತ್ ಸದಸ್ಯರು ಸೇರಿ 13 ಮಂದಿ ವಿರುದ್ಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಹೈಗ್ರೌಂಡ್ಸ್ ಠಾಣೆಯ ಪಿಎಸ್ಸೈ ಶಶಿಧರ್ ವಣ್ಣೂರು ನೀಡಿದ ದೂರಿನ್ವಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸದಸ್ಯರಾದ ಸಿ.ಟಿ.ರವಿ, ರವಿಕುಮಾರ್, ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ ಹಾಗೂ ಬಿಜೆಪಿ ನಾಯಕರು ಸೇರಿ ಒಟ್ಟು 13 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ನೋಟಿಸ್ ನೀಡುವ ಸಾಧ್ಯತೆ ಇದೆ.

ಸಾರ್ವಜನಿಕ ಸ್ವತ್ತಿಗೆ ಹಾನಿ ಹಾಗೂ ನಗರದ ಸೌಂದರ್ಯಕ್ಕೆ ಧಕ್ಕೆ ಉಂಟು ಮಾಡಿದ ಆರೋಪದಡಿ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಹೇಳಿದ್ದಾರೆ.

ಏನಿದು ಪ್ರತಿಭಟನೆ?: ಬೀದರ್ ನ ಭಾಲ್ಕಿ ತಾಲೂಕಿನ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸರಕಾರ ಕಾರಣ ಎಂದು ಆರೋಪಿಸಿ ಡಿ.31ರಂದು ಬಿಜೆಪಿ ನಾಯಕರು ಬೆಂಗೂರಿನಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ನಿವಾಸ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಪೋಸ್ಟರ್‍ಗಳನ್ನು ಅಂಟಿಸಿ ಪ್ರತಿಭಟಿಸಿತ್ತು.

ಈ ಬಗ್ಗೆ ತಿಳಿವಳಿಕೆ ನೀಡಿದರೂ ಮಾತು ಕೇಳದೇ ಪೋಸ್ಟರ್ ಅಂಟಿಸಿದ್ದರು. ಈ ಸಂಬಂಧ ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ಹಾಗೂ ರವಿಕುಮಾರ್ ಒಳಗೊಂಡಂತೆ 13 ಮಂದಿಯನ್ನ ಪೊಲೀಸ್ ವಶಕ್ಕೆ ಪಡೆದುಕೊಂಡು ಬಿಡುಗಡೆಗೊಳಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News