ನನ್ನ ವಿರುದ್ದ ಎಫ್‍ಐಆರ್ ಹಾಸ್ಯಾಸ್ಪದ, ನ್ಯಾಯಾಲಯದ ಮೂಲಕ ಉತ್ತರ ಕೊಡುತ್ತೇನೆ: ಎಚ್.ಡಿ. ಕುಮಾರಸ್ವಾಮಿ

Update: 2024-11-05 14:08 GMT

Photo:X/@hd_kumaraswamy

ಬೆಂಗಳೂರು: ‘ನನ್ನ ವಿರುದ್ಧ ಐಪಿಎಸ್ ಅಧಿಕಾರಿಯೊಬ್ಬರು ದೂರಿನ ಮೇರೆಗೆ ಪೊಲೀಸರು ದಾಖಲು ಮಾಡಿರುವ ಎಫ್‍ಐಆರ್ ದಾಖಲಿಸಿರುವುದು ಹಾಸ್ಯಾಸ್ಪದ. ಮಾತ್ರವಲ್ಲ, ದುರುದ್ದೇಶಪೂರಿತ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಎನ್‍ಡಿಎ ಅಭ್ಯರ್ಥಿ ನಿಖಿಲ್ ಪರ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಉಪ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಸರಕಾರ ಭಾರೀ ಉಮೇದಿನಿಂದ ನಮ್ಮ ವಿರುದ್ಧ ದ್ವೇಷ ಸಾಧನೆ ಮಾಡುತ್ತಿದೆ. ಇದಕ್ಕೆ ನ್ಯಾಯಾಲಯದ ಮೂಲಕವೇ ಉತ್ತರ ಕೊಡುತ್ತೇನೆ ಎಂದು ತಿರುಗೇಟು ನೀಡಿದರು.

ನನ್ನ ವಿರುದ್ದ ದಾಖಲಿಸಿರುವ ಎಫ್‍ಐಆರ್ ಪ್ರತಿಯನ್ನು ಓದಿದೆ. ಅದರಲ್ಲಿರುವ ದೂರಿನ ಸಾರಾಂಶವನ್ನೂ ಓದಿದೆ. ಅದು ಸಂಪೂರ್ಣ ಹಾಸ್ಯಾಸ್ಪದ ಹಾಗೂ ದುರದ್ದೇಶಪೂರಿತ ಎನ್ನುವುದು ನನಗೆ ಅರ್ಥವಾಯಿತು. ಅಲ್ಲಿ ದೂರುದಾರರೇ ಹೇಳಿಕೊಂಡಿದ್ದಾರೆ, ಕುಮಾರಸ್ವಾಮಿ ಮಾಧ್ಯಮಗೋಷ್ಠಿ ಮಾಡಿ ನನ್ನ ವಿರುದ್ಧ ಆರೋಪ ಮಾಡಿದರು. ಅದಕ್ಕೆ ಕ್ರಮ ಕೈಗೊಳ್ಳಿ ಎಂದು ಕೇಳಿದ್ದಾರೆ. ನಾನು ಅವರ ಬಗ್ಗೆ ತಪ್ಪು ಮಾಹಿತಿ ನೀಡಿದೇನೆಂದು ಹೇಳಿಕೊಂಡಿದ್ದಾರೆ? ಬೇಕಾದರೆ ನನ್ನ ಮಾಧ್ಯಮಗೋಷ್ಠಿಯ ವಿಡಿಯೋ ನೋಡಿಕೊಳ್ಳಲಿ ಎಂದು ಅವರು ಹೇಳಿದರು.

ನಾನು ಸುದ್ದಿಗೋಷ್ಠಿ ಮಾಡಿದೆ ಎಂದು, ಹೇಳಿಕೆ ನೀಡಿದರು ಎಂದು ಚನ್ನಪಟ್ಟಣದ ಅಭ್ಯರ್ಥಿ ನಿಖಿಲ್ ಮೇಲೆಯೂ ಎಫ್‍ಐಆರ್ ಮಾಡಿಸಿದ್ದಾರೆ. ಸರಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಕೊಟ್ಟರು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಮೇಲೆಯೂ ಎಫ್‍ಐಆರ್ ಮಾಡಿಸಿದ್ದಾರೆ. ಹಾಗಾದರೆ, ಯಾರ ವಿರುದ್ಧವೂ ಮಾತನಾಡಬಾರದು, ದೂರು ನೀಡಬಾರದೆಂದು ಕಾನೂನಿನಲ್ಲಿ ಇದೆಯೇ? ನಮ್ಮ ಬಾಯಿಮುಚ್ಚಿಸಲು ಇವರಿಂದ ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೊಂದು ಷಡ್ಯಂತ್ರ ಹಾಗೂ ಕುತಂತ್ರದ ಭಾಗ. ಯಾವಾಗ ಚನ್ನಪಟ್ಟಣದಲ್ಲಿ ಇವರ ಮೋಸ ಕುತಂತ್ರ ನಡೆಯಲ್ಲ ಎಂದು ಗೊತ್ತಾಯಿತೋ ಹೊಸ ಕುತಂತ್ರಕ್ಕೆ ಮುಂದಾಗಿದ್ದಾರೆ. ನಮಗೆ ಅಂಬೇಡ್ಕರ್ ರ ಸಂವಿಧಾನ, ಕಾನೂನಿನ ಮೇಲೆ ಗೌರವ ಇದೆ. ನನ್ನ ಚನ್ನಪಟ್ಟಣದ ಜನರ ಮೇಲೆ ವಿಶ್ವಾಸ ಇದೆ. ಹೀಗಿರುವಾಗ ಇಂತಹ ನೂರು ಎಫ್‍ಐಆರ್ ದಾಖಲಾದರೂ ನಾವು ಧೃತಿಗೆಡಲ್ಲ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News