ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ: ಪ್ರಹ್ಲಾದ್ ಜೋಶಿ ಸಹೋದರ,ಸಹೋದರಿ ಸಹಿತ ಮೂವರ ವಿರುದ್ಧ ಎಫ್ಐಆರ್ ದಾಖಲು
Update: 2024-10-17 17:40 GMT
ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ಪಡೆದು ವಂಚಿಸಿದ ಆರೋಪದಡಿ ಇಲ್ಲಿನ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಸಹಿತ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನನ್ವಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ವಿಜಯ್ ಲಕ್ಷ್ಮೀ ಜೋಶಿ, ಅಜಯ್ ಜೋಶಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 2024ನೇ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಬಿಜಾಪುರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಗೋಪಾಲ್ ಜೋಶಿ ಹಾಗೂ ವಿಜಯಲಕ್ಷ್ಮೀ ಜೋಶಿ, ಅಜಯ್ ಜೋಶಿ ಅವರುಗಳು ಸೇರಿಕೊಂಡು ಐದು ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟು 2.25 ಕೋಟಿ ರೂ. ಪಡೆದು ವಂಚಿಸಿದ್ದಾರೆ. ಟಿಕೆಟ್ ಸಿಗದಿದ್ದಕ್ಕೆ ಹಣ ವಾಪಸ್ ಕೇಳಿದಾಗ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.