ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಜಾಮೀನು ರಹಿತ ಸೆಕ್ಷನ್ ಗಳಡಿ ಎಫ್ಐಆರ್ ದಾಖಲು
ಬೆಂಗಳೂರು: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ರವಿವಾರ ಮಂಡ್ಯದಲ್ಲಿ ನೀಡಿರುವ ಅತ್ಯಂತ ಅವಹೇಳನಕಾರಿ ಹೇಳಿಕೆಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಇಂದು ಆತನ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಎಂಬ ಆರೋಪಿ ವಿರುದ್ದ ಜಾಮೀನು ರಹಿತ ಸೆಕ್ಷನ್ ಗಳಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಇತರರ ವಿರುದ್ದ ಐಪಿಸಿ ಸೆಕ್ಷನ್ 354, 294, 509, 506, 153A, 295, 295A, 298 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮುಸ್ಲಿಂ ಮಹಿಳೆಯರ ಕುರಿತು ಪ್ರಭಾಕರ ಭಟ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಧರ್ಮಗಳ ನಡುವೆ ಗಲಭೆ, ಅಶಾಂತಿ ಸೃಷ್ಟಿಸುವ ರೀತಿಯಲ್ಲಿ ಮಾತನಾಡಿ ನ್ಯಾಯಾಂಗ ವ್ಯವಸ್ಥೆಯನ್ನೂ ಅಣಕಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿರುವ ನಜ್ಮಾ ನಝೀರ್, ಪ್ರಭಾಕರ ಭಟ್ ವಿರುದ್ಧ ರೌಡಿಶೀಟ್ ತೆರೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಭಾಕರ ಭಟ್ ವಿರುದ್ಧ ಈ ಹಿಂದೆಯೂ ರಾಜ್ಯದ ಹಲವು ಠಾಣೆಗಳಲ್ಲೂ ಈ ರೀತಿಯ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಅವರ ವಿರುದ್ಧ ರೌಡಿಶೀಟ್ ತೆರೆಯಬೇಕು ಎಂದು ನಜ್ಮಾ ದೂರಿನಲ್ಲಿ ಒತ್ತಾಯಿಸಿದ್ದಾರೆ.
ರವಿವಾರ ಮಂಡ್ಯದಲ್ಲಿ ನಡೆದ ಹನುಮ ಶೋಭಾಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, "ಹಿಂದೆ ತಲಾಕ್ ತಲಾಕ್ ಎಂದು ಹೇಳಿ ಕೈತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗ್ತಿದ್ದ. ನಿಮಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ" ಎಂದು ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದ. ಇನ್ನೂ ಅನೇಕ ಪ್ರಚೋದನಕಾರಿ ಮಾತುಗಳನ್ನು ಅದೇ ಭಾಷಣದಲ್ಲಿ ಪ್ರಭಾಕರ್ ಭಟ್ ಹೇಳಿದ್ದ. ಈ ಬಗ್ಗೆ ರಾಜ್ಯಾದ್ಯಂತ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.