ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ | ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಸೇರಿ ಗಣ್ಯರ ಸಂತಾಪ

Update: 2024-12-26 18:30 GMT

ಡಾ.ಮನಮೋಹನ್‌ ಸಿಂಗ್‌ | PC : x@CMofKarnataka

ಬೆಂಗಳುರು : ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ (92) ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ,  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್‌.ಅಶೋಕ್‌, ವಿಜಯೇಂದ್ರ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಭಾರತ ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞರಲ್ಲಿ ಒಬ್ಬರು ಹಾಗೂ ಒಂದು ದಶಕದ ಕಾಲ ದೇಶದ ಪ್ರಧಾನಿಯಾಗಿದ್ದ ಡಾ.ಮನಮೋಹನ್ ಸಿಂಗ್ ಗುರುವಾರ ರಾತ್ರಿ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. 2004 ರಿಂದ 2014 ರವರೆಗೆ ಅವರು ದೇಶದ ಪ್ರಧಾನಿಯಾಗಿದ್ದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ.

ಮಾತಿಗಿಂತ ಕೃತಿ‌ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ.

ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಸಿದ್ದರಾಮಯ್ಯ, ಮುಖ್ಯಮಂತ್ರಿ

ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಧಿವಶರಾದ ಸುದ್ದಿ ತೀವ್ರ ನೋವುಂಟು ಮಾಡಿದೆ.

ಕೇಂದ್ರ ಹಣಕಾಸು ಸಚಿವರಾಗಿ, ಆರ್ ಬಿಐ ಗವರ್ನರ್ ಆಗಿ, ಆರ್ಥಿಕ ಸಲಹೆಗಾರರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಸುಮಾರು ಐದು ದಶಕಗಳ ಕಾಲ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ.ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶ ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ.

ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ‌ ಪ್ರಾರ್ಥಿಸುತ್ತೇನೆ. 

ಆರ್‌.ಅಶೋಕ್‌, ವಿಪಕ್ಷ ನಾಯಕರು

ದೇಶದ ಅರ್ಥ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸಿ, ಆರ್ಥಿಕ ಉದಾರೀಕರಣದ ರೂವಾರಿಯಾಗಿ ಭಾರತದ ಬೆಳವಣಿಗೆಗೆ ಅಮೋಘ ಕೊಡುಗೆ ನೀಡಿದ್ದ ವಿಶ್ವ ಕಂಡ ಶ್ರೇಷ್ಠ ಆರ್ಥಿಕ ತಜ್ಞರೂ ಆದ ಮಾಜಿ ಪ್ರಧಾನಿ  ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುವೆ. ಅವರ ಸರಳತೆ, ಸಜ್ಜನಿಕೆಯಿಂದಾಗಿ ಅಪರೂಪದ ವಿನಯವಂತ ಪಾಂಡಿತ್ಯ ಮೂರ್ತಿಯನ್ನು ಅವರಲ್ಲಿ ಕಾಣುವಂತಾಗಿತ್ತು. ಪಕ್ಷಾತೀತವಾಗಿ ಎಲ್ಲರ ಹೃದಯದಲ್ಲೂ ಸ್ನೇಹದ ಬಾಂಧವ್ಯ ಬೆಸೆದಿದ್ದ ಅವರು ಅಕ್ಷರಶಃ ಅಜಾತಶತ್ರುವಾಗಿದ್ದರು.

ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷರು

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News