ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಸಿಎಂ ಸಿದ್ದರಾಮಯ್ಯ ಭರವಸೆ

Update: 2024-02-03 11:14 GMT

Photo: X/@siddaramaiah

ದಾವಣಗೆರೆ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಬಜೆಟ್‌ನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ 38ನೇ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಿಮ್ಮೊಂದಿಗೆ ನಾವಿರುತ್ತೇವೆ. ನಾವು ಒಳ್ಳೆಯ ಕೆಲಸ ಮಾಡಿದರೆ ಒಳ್ಳೆಯದನ್ನು ಬರೆಯಿರಿ, ಕೆಟ್ಟದ್ದನ್ನು ಮಾಡಿದರೆ ಕೆಟ್ಟದ್ದು ಬರೆಯಿರಿ. ಒಳ್ಳೆಯದನ್ನು ಕೆಟ್ಟದ್ದೆಂದು ಬಿಂಬಿಸಬಾರದು ಎಂದು ಸಲಹೆ ನೀಡಿದರು.

ಮೌಢ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ʼಬಿಟ್ಟಿ ಗ್ಯಾರಂಟಿʼ ಎಂದು ಕರೆಯಬಾರದು. ಪಕ್ಷಾತೀತ, ಜಾತ್ಯತೀತ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ʼಬಿಟ್ಟಿ ಗ್ಯಾರಂಟಿʼ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು.

ಪತ್ರಿಕಾ ವೃತ್ತಿ ಸಮಾಜದ ಅಸಮಾನತೆ ಹೋಗಲಾಡಿಸಲು, ಅವಕಾಶ ವಂಚಿತರ ಪರವಾಗಿ, ಮೀಸಲಾತಿಯ ಆಶಯಗಳ ಪರವಾಗಿ ಇರಬೇಕು. ಇದರಿಂದ ಸಾಮಾಜಿಕ ನ್ಯಾಯಯನ್ನು ದ್ವನಿ ಇಲ್ಲದವರಿಗೆ ಕೊಡಲು ಸಾಧ್ಯ. ಹೀಗಾದಾಗ ಬಸವಣ್ಣನವರ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಪತ್ರಕರ್ತರು ಇದಕ್ಕೆ ಪೂರಕವಾಗಿ ವಸ್ತುನಿಷ್ಠವಾಗಿ ಕೆಲಸ ಮಾಡಬೇಕು ಎಂದರು.

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಸಹಯೋದಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಶಿವಾನಂದ ತಗಡೂರು ವಹಿಸಿದ್ದರು.

ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಬಸವಂತಪ್ಪ, ಡಿ.ಜಿ.ಶಾಂತನಗೌಡ, ಇನ್ ಸೈಟ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ.ಬಿ.ವಿನಯ್‌ಕುಮಾರ್ ಸೇರಿ ಸಂಘದ ಪದಾಧಿಕಾರಿಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News