ಮಾ.25 ರಿಂದ ಎಸೆಸೆಲ್ಸಿ ಪರೀಕ್ಷೆ ಆರಂಭ: 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

Update: 2024-03-24 06:06 GMT

ಬೆಂಗಳೂರು: 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1ಯು ನಾಳೆಯಿಂದ(ಮಾ.25) ಪ್ರಾರಂಭವಾಗುತ್ತಿದ್ದು, ರಾಜ್ಯಾದ್ಯಂತ 2,750 ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು ಹಾಗೂ 18,225 ಖಾಸಗಿ ವಿದ್ಯಾರ್ಥಿಗಳಾಗಿದ್ದಾರೆ. 41,375 ಪುನರಾವರ್ತಿರ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆಯನ್ನು ಬರೆಯುತ್ತಿದ್ದು, ಈ ಬಾರಿ 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳು ಕನ್ನಡ, ಆಂಗ್ಲ, ಹಿಂದಿ, ತೆಲುಗು, ತಮಿಳು, ಉರ್ದು ಮತ್ತು ಮರಾಠಿ ಸೇರಿ ಒಟ್ಟು ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್‍ ಫೋನ್ ನಿಷೇಧಿಸಲಾಗಿದೆ.

ಕೇಂದ್ರಗಳ ಸುತ್ತಾಮುತ್ತಾ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಸಿಸಿಟಿವಿ ಕ್ಯಾಮರಾ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾವಹಿಸಲಾಗುವುದು.

ನಿರ್ದೇಶಕರು ಮತ್ತು ಸಹನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಡಯಟ್ ಪ್ರಾಂಶುಪಾಲರನ್ನು ಆಯಾ ಜಿಲ್ಲೆಗೆ ಜಿಲ್ಲಾ ವೀಕ್ಷಕರಾಗಿ ನೇಮಿಸಲಾಗಿದೆ. ಡಯಟ್ ಉಪನ್ಯಾಸಕರನ್ನು ಪರೀಕ್ಷಾ ಕೇಂದ್ರಗಳಿಗೆ ವಿಚಕ್ಷಣ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಶಿಕ್ಷಣ ಇಲಾಖೆಯು ತಿಳಿಸಿದೆ.

ವೇಳಾಪಟ್ಟಿ: ಮಾ.25ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಇಂಗ್ಲಿಷ್(ಎನ್‍ಸಿಇಆರ್‍ಟಿ) ಮತ್ತು ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ. ಮಾ.27ರಂದು ಸಮಾಜ ವಿಜ್ಞಾನ ಪರೀಕ್ಷೆ, ಮಾ.30ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ ಪರೀಕ್ಷೆ ನಡೆಯಲಿದೆ.

ಎ.2ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆ, ಎ.3ರಂದು ಅರ್ಥಶಾಸ್ತ್ರ ಪರೀಕ್ಷೆ, ಮಾ.4ರಂದು ತೃತೀಯ ಭಾಷೆ ಹಿಂದಿ, ಹಿಂದಿ(ಎನ್‍ಸಿಇಆರ್‍ಟಿ), ಕನ್ನಡ, ಇಂಗ್ಲೀಷ್ ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ ಮತ್ತು ತುಳು ಪರೀಕ್ಷೆಗಳು ನಡೆಯಲಿವೆ. ಎ.6ರಂದು ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ಕನ್ನಡ ಪರೀಕ್ಷೆಗಳು ನಡೆಯಲಿವೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News