ಪಿಎಸ್ಐ ಪರೀಕ್ಷೆ ಮುಂದೂಡಿಕೆ ವಿಚಾರ | ಕೆಇಎ, ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ : ಜಿ.ಪರಮೇಶ್ವರ್‌

Update: 2024-09-10 10:46 GMT

ಜಿ.ಪರಮೇಶ್ವರ್‌ 

ಬೆಂಗಳೂರು : ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ‌ ನಿರ್ಧಾರ ಕೈಗೊಳ್ಳುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ತಿಳಿಸಿದರು.

ಸದಾಶಿವನಗರದ ಸಚಿವರ ಗೃಹ ಕಚೇರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್, ಶಾಸಕ ಧೀರಜ್ ಮುನಿರಾಜ್ ನೇತೃತ್ವದ ನಿಯೋಗದಿಂದ‌ ಮನವಿ ಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

"402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹೊಣೆಯನ್ನು ಕೆಇಎಗೆ ವಹಿಸಲಾಗಿದೆ. ಸೆ.22ರಂದು ಪರೀಕ್ಷೆ ನಡೆಸಲು ದಿನ ನಿಗದಿ ಮಾಡಿದ್ದಾರೆ. ಪಿಎಸ್‌ಐ ಪರೀಕ್ಷೆ ಬರೆಯಬೇಕಾದ ನೂರಕ್ಕು ಹೆಚ್ಚು ಆಕಾಂಕ್ಷಿಗಳು, ಯುಪಿಎಸ್‌ಸಿ ಮುಖ್ಯ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಹೀಗಾಗಿ ಪರೀಕ್ಷಾ ದಿನ ಮುಂದೂಡುವಂತೆ ಮನವಿ ಸಲ್ಲಿಸಿದ್ದಾರೆ. ಪರೀಕ್ಷೆ‌ ಮುಂದೂಡುವ ಕುರಿತ ಸಾಧಕ-ಬಾಧಕಗಳನ್ನು ಇಲಾಖೆಯ ಅಧಿಕಾರಿಗಳು ಹಾಗೂ ಕೆಇಎ ಅವರೊಂದಿಗೆ ಮತ್ತೊಮ್ಮೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು" ಎಂದರು.

ಬಿಜೆಪಿ ಆಡಳಿತದ ಅವಧಿಯಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ಬಳಿಕ ನೇಮಕಾತಿ ನಡೆದಿಲ್ಲ. ಎಲ್ಲ ಗೊಂದಲದ ನಡುವೆಯೂ ಕೋರ್ಟ್‌ನಿಂದ ಅನುಮತಿ ಪಡೆದು ಮರುಪರೀಕ್ಷೆ ನಡೆಸಲಾಗಿದೆ‌. ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ಹಂತದಲ್ಲಿದೆ. ಈ ನಡುವೆಯೇ ಮತ್ತೆ ಕೆಲವರು ಕೋರ್ಟ್‌ಗೆ ಹೋಗಿದ್ದು, ಅಂತಿಮ‌ಪಟ್ಟಿ ಪ್ರಕಟಿಸಲು ವಿಳಂಬವಾಗುತ್ತಿದೆ ಎಂದು ತಿಳಿಸಿದರು.

ಕಳೆದ ನಾಲ್ಕು ವರ್ಷಗಳಿಂದ ಪಿಎಸ್ಐ ನೇಮಕಾತಿ ನಡೆದಿಲ್ಲ. ಸಿಂಧುತ್ವ, ದಾಖಲಾತಿ ಪರಿಶೀಲನೆ, ತರಬೇತಿ ಪಡೆದು ಇಲಾಖೆಗೆ ಸೇರಲು‌ ಒಂದು ವರ್ಷ ಬೇಕಾಗುತ್ತದೆ. ಎರಡು ವರ್ಷ ಪ್ರೊಬೆಷನರಿ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ಪರಿಸ್ಥಿತಿಯ ಹಿನ್ನೆಲೆಯಲ್ಲಿ, 402 ಪಿಎಸ್‌ಐ ಹುದ್ದೆಗಳಿಗೆ ಆದಷ್ಟು ಬೇಗ ಪರೀಕ್ಷೆ ನಡೆಸಲು ಮುಂದಾಗಿದ್ದೇವೆ. ಇದಾದ ನಂತರ 600 ಪಿಎಸ್ಐ ಹುದ್ದೆಗಳಿಗೂ ನೇಮಕಾತಿಗೆ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು‌.

ಕೆಲ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದು, ಕೆಇಎ ಮತ್ತು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಈಗ ಪರೀಕ್ಷೆ ಮುಂದೂಡಿದರೆ, ಮುಂದಿನ ಆರು ತಿಂಗಳವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ಕೆಇಎ ಅವರು ತಿಳಿಸಿದ್ದಾರೆ. ಪಿಎಸ್ಐ ಪರೀಕ್ಷೆ ಮುಂದೂಡುವಂತೆ ತಿಳಿಸಿದರೆ‌ ಮುಂದೂಡುತ್ತಾರೆ. ಆದರೆ, ಪರೀಕ್ಷೆ ನಡೆಸಲು 6 ತಿಂಗಳು ಬೇಕಾಗುತ್ತದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News