ಗೌರಿ ಲಂಕೇಶ್ ಹತ್ಯೆ ಪ್ರಕರಣ | ವಿಶೇಷ ತನಿಖೆಗೆ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ನಮ್ಮನ್ನು ಬಂಧಿಸುವ ಮುನ್ನ ನಮ್ಮ ಬಂಧನದ ಬಗ್ಗೆ ನಮ್ಮ ಕುಟುಂಬದ ಅಥವಾ ಹತ್ತಿರದ ಸದಸ್ಯರ ಗಮನಕ್ಕೆ ತಂದಿಲ್ಲ ಮತ್ತು ಪೊಲೀಸ್ ಬಂಧನದಲ್ಲಿದ್ದಾಗ ನಮಗೆ ದೈಹಿಕವಾಗಿ ಹಿಂಸೆ ನೀಡಿದ್ದಾರೆ. ಹೀಗಾಗಿ ವಿಶೇಷ ತನಿಖೆ ನಡೆಸುವಂತೆ ಸರಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕಾನೂನು ಬಾಹಿರವಾಗಿ ನಮ್ಮನ್ನು ಬಂಧಿಸಿ, ಹಿಂಸೆ ನೀಡಿದ ಕುರಿತಂತೆ ವಿಶೇಷ ತನಿಖೆ ನಡೆಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರಕರಣದ ಆರೋಪಿಗಳಾದ ಸುಜಿತ್ ಕುಮಾರ್, ಮನೋಹರ ಎಡವೆ, ಅಮೋಲ್ ಕಾಳೆ ಮತ್ತು ಅಮಿತ್ ರಾಮಚಂದ್ರ ದಿಗ್ವೇಕರ್ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎನ್.ಎಸ್.ಸಂಜಯ ಗೌಡ ಅವರಿದ್ದ ಏಕಸದಸ್ಯ ಪೀಠ, ಈಗಾಗಲೇ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹಾಗಾಗಿ ಈ ಮನವಿಯನ್ನು ಪರಿಗಣಿಸಲಾಗದು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿಯನ್ನು ಇತ್ಯರ್ಥಗೊಳಿಸಿದೆ.