ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಎಕ್ಸ್ ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್: ಡಿ.ಕೆ.ಶಿವಕುಮಾರ್
ಹೊಸದಿಲ್ಲಿ, ಆ. 3: ‘ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಜತೆ ಚರ್ಚೆ ಮಾಡಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ವಿಸ್ತೃತ ಯೋಜನಾ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ. ಈಗಾಗಲೇ ಬಬಿಎಂಪಿ ಹಾಗೂ ಬಿಡಿಎ ಮೂಲಕ ಎಕ್ಸ್ ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್ ಕರೆಯಲಾಗಿದ್ದು, ಟೆಂಡರ್ ಸಲ್ಲಿಕೆಗೆ ಆ.8 ಕೊನೆಯ ದಿನವಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗುರುವಾರ ದಿಲ್ಲಿ ಕರ್ನಾಟಕ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿದ್ದು, ಈ ರಸ್ತೆಗಳ ಮೂಲಕ ಬೆಂಗಳೂರಿಗೆ ಹೆಚ್ಚಿನ ವಾಹನಗಳು ಆಗಮಿಸಿ ಸಂಚಾರ ದಟ್ಟಣೆಗೆ ಕಾರಣವಾಗಿವೆ. ಈ ಸಂಚಾರ ದಟ್ಟಣೆ ನಿವಾರಣೆಗೆ ಕೇಂದ್ರ ಹೆದ್ದಾರಿ ಪ್ರಾಧಿಕಾರದ ಮೂಲಕ ಕ್ರಮ ಕೈಗೊಳ್ಳಬೇಕು. ಅದಕ್ಕೆ ಬೇಕಾದ ಸಹಕಾರ ನೀಡಬೇಕು ಎಂದು ಕೇಂದ್ರ ಸಚಿವರ ಜತೆ ಚರ್ಚಿಸಿದ್ದೇನೆ. ನಮ್ಮ ವಿಚಾರಕ್ಕೆ ನಿತಿನ್ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಅವರು ತಮ್ಮ ಸಲಹೆಯನ್ನೂ ನೀಡಿದ್ದಾರೆ. ಸುರಂಗ ರಸ್ತೆ, ಫ್ಲೈಓವರ್ ಅಥವಾ ಇತರೆ ಮಾದರಿ ಯೋಜನೆ ಜಾರಿ ಮಾಡಲು ಯೋಜನಾ ವರದಿ ಸಿದ್ಧಪಡಿಸಲು ತಿಳಿಸಿದ್ದಾರೆ. ಈಗಾಗಲೇ ಜು.14ರಂದ ಬಿಡಿಎ ಹಾಗೂ ಬಿಬಿಎಂಪಿಯಿಂದ ಎಕ್ಸ್ ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್ ಕರೆದಿದ್ದೇವೆ. ಆ.8ರಂದು ಕೊನೆಯ ದಿನವಾಗಿದೆ ಎಂದು ಹೇಳಿದರು.
ಸಂಚಾರ ದಟ್ಟಣೆ ನಿಯಂತ್ರಣ ಮಾಡಿ ಬೆಂಗಳೂರಿನ ಚಿತ್ರಣ ಬದಲಿಸಬೇಕಿದೆ. ದಿಲ್ಲಿ, ಮುಂಬೈ ನಗರಗಳಲ್ಲೂ ಸಂಚಾರ ದಟ್ಟಣೆ ಹೆಚ್ಚಾಗಿದ್ದರೂ, ಬೆಂಗಳೂರನ್ನು ಜಾಗತಿಕ ನಗರ ಎಂದು ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಕೇವಲ ಬೆಂಗಳೂರಿನ ಸಂಚಾರ ದಟ್ಟಣೆ ಬಗ್ಗೆ ಮಾತ್ರ ಹೆಚ್ಚಾಗಿ ಮಾತನಾಡುತ್ತಾರೆ. ಸಂಚಾರ ದಟ್ಟಣೆ ನಿವಾರಣೆಗೆ ಕಾರ್ಯಕ್ರಮ ರೂಪಿಸಲು ನಾವು ಸಜ್ಜಾಗುತ್ತಿದ್ದು, ಈಗಾಗಲೇ ಚೀನಾ, ಸಿಂಗಾಪುರ, ಇಸ್ರೇಲ್ ಸೇರಿದಂತೆ ಹತ್ತಾರು ಕಂಪೆನಿಗಳು ಬಂದು ತಮ್ಮ ವಿಚಾರ ತಿಳಿಸಿವೆ. ಈ ಕಂಪೆನಿಗಳಿಗೆ ಈಗಾಗಲೇ ಎಕ್ಸ್ ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಕರೆಯಲಾಗಿರುವ ಟೆಂಡರ್‍ನಲ್ಲಿ ಭಾಗವಹಿಸಿ, ಇಡೀ ಯೋಜನೆ ಹೇಗೆ ಜಾರಿ ಮಾಡಬಹುದು ಎಂದು ವಿವರಿಸುವಂತೆ ತಿಳಿಸಿದ್ದೇವೆ ಎಂದರು.
ಸಮಸ್ಯೆ ಬಗೆಹರಿಸಲು ಪ್ರಯತ್ನ: ‘ನೀರು ಹಂಚಿಕೆ ವಿವಾದ ಸಂಬಂಧ ಕಾನೂನು ತಜ್ಞರ ಜತೆ ಸಭೆ ಮಾಡಲಾಗಿದೆ. ಈವರೆಗೂ ನಾವು ಅಂತಿಮ ನಿರ್ಣಯಕ್ಕೆ ಬಂದಿಲ್ಲ. ಮಹದಾಯಿ, ಕಾವೇರಿ, ಕೃಷ್ಣಾ ನದಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆ ವಿಚಾರವಾಗಿ ಮಾಹಿತಿ ಪಡೆದಿದ್ದೇನೆ. ಉಳಿದ ವಿಚಾರವನ್ನು ಸಿಎಂ ಜತೆ ಚರ್ಚೆ ಮಾಡಿ, ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಉಳಿದ ನಿರ್ದೇಶನ ನೀಡಲಾಗುವುದು. ನಮಗೆ ಸಮಯ ವ್ಯರ್ಥ ಮಾಡಲು ಇಷ್ಟವಿಲ್ಲ. ಆದಷ್ಟು ಬೇಗ ಎಲ್ಲ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ನುಡಿದರು.
‘ಬಿಬಿಎಂಪಿ ಕಾಮಗಾರಿಗಳ ಅಕ್ರಮದ ತನಿಖೆ ಮಾಡುವಂತೆ ಬಿಜೆಪಿ ಶಾಸಕರೇ ಸಲಹೆ ನೀಡಿದ್ದಾರೆ. ಅವರ ಸಲಹೆ ಗಮನದಲ್ಲಿಟ್ಟುಕೊಂಡು ವಾಸ್ತವಾಂಶ ಅರಿಯಲು ವರದಿ ಕೇಳಿದ್ದೇನೆ. ಅನೇಕರು ವರ್ಷಾನುಗಟ್ಟಲೆಯಿಂದ ಬಿಲ್‍ಗಾಗಿ ಕಾಯುತ್ತಿದ್ದಾರೆ. ಯಾರು ಕೆಲಸ ಕೊಟ್ಟಿದ್ದಾರೆ? ಯಾವ ಕೆಲಸ ಆಗಿದೆ, ಅದರ ಗುಣಮಟ್ಟ ಏನಿದೆ? ಎಂದು ಪರಿಶೀಲನೆ ಆಗಬೇಕು. ಈ ವರದಿ ಬಂದ ನಂತರ ವಿವರವಾಗಿ ಮಾತನಾಡುತ್ತೇನೆ ಎಂದು ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.