ನಾಡದೇವತೆ ಚಾಮುಂಡೇಶ್ವರಿಗೂ ಪ್ರತೀ ತಿಂಗಳು 'ಗೃಹಲಕ್ಷ್ಮಿ'ಯ 2 ಸಾವಿರ ರೂ. ಪಾವತಿಸಲು ಶಾಸಕ ಗೂಳಿಗೌಡ ಮನವಿ

Update: 2023-11-17 05:50 GMT

ಬೆಂಗಳೂರು, ನ.17: ರಾಜ್ಯ ಸರಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರೂ.ನ್ನು ಪ್ರತೀ ತಿಂಗಳು ಮೊದಲು ಮೈಸೂರಿನ ನಾಡದೇವತೆ ಚಾಮುಂಡೇಶ್ವರಿಗೆ ಅರ್ಪಿಸಿ ನಂತರ ಫಲಾನುಭವಿಗಳಿಗೆ ವಿತರಿಸುವಂತೆ ಶಾಸಕ ದಿನೇಶ್ ಗೂಳಿಗೌಡ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗೆ ಪತ್ರ ಬರದಿರುವ ಶಾಸಕ ಗೂಳಿಗೌಡ, ಚುನಾವಣೆಗೂ ಪೂರ್ವ ಕಾಂಗ್ರೆಸ್ ಪಕ್ಷದ ವತಿಯಿಂದ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿ ಪಕ್ಷದ ಐದು ಗ್ಯಾರಂಟಿಗಳ ಕಾರ್ಡ್ ಅನ್ನು ಇಟ್ಟು ದೇವಿಯ ಬಳಿ, ಶಕ್ತಿ ಕೊಡು ಎಂದು ಕೋರಿಕೆಯನ್ನಿಡಲಾಗಿತ್ತು. ಆ ಸಂದರ್ಭದಲ್ಲಿ ಹರಕೆಯನ್ನು ನಾಡದೇವತೆ ಬಳಿ ಮಾಡಿಕೊಳ್ಳಲಾಗಿತ್ತು. ಪಕ್ಷ ಅಧಿಕಾರಕ್ಕೆ ಬಂದರೆ, ಗ್ಯಾರಂಟಿ ಈಡೇರಿಸುವ ವಾಗ್ದಾನವನ್ನೂ ಮಾಡಲಾಗಿತ್ತು. ನಂತರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಅಭೂತಪೂರ್ವ ಬೆಂಬಲವನ್ನು ವ್ಯಕ್ತಪಡಿಸಿದ್ದರು. ಪರಿಣಾಮ 135 ಸ್ಥಾನಗಳೊಂದಿಗೆ ಸಂಪೂರ್ಣ ಬಹುಮತವನ್ನು ಪಡೆದು ಈಗ ಜನಪರ ಜನಪ್ರಿಯ ಆಡಳಿತವನ್ನು ನೀಡುತ್ತಿದೆ. ಇದಕ್ಕೆ ಕಾರಣವಾಗಿರುವ, ಆಶೀರ್ವಾದ ನೀಡಿ ಹರಸಿರುವ ಚಾಮುಂಡೇಶ್ವರಿಗೆ ಮೈಸೂರಿನಲ್ಲಿ ಪೂಜೆ ಸಲ್ಲಿಸಿ ಆಗಸ್ಟ್ 30ರಂದು ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಈ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ.

ಅಂದು ಹರಕೆ ತೀರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಹಿಳಾ ಮತ್ತು ಕುಟುಂಬ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಶಾಸಕರ ಜೊತೆ ದೇಗುಲಕ್ಕೆ ಭೇಟಿ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಮಾತ್ರವಲ್ಲ ಗೃಹ ಲಕ್ಷ್ಮಿಯರಿಗೆ ನೀಡುವ 2 ಸಾವಿರ ರೂ.ಗಳನ್ನು ದೇವಿಗೆ ಸಲ್ಲಿಸಲಾಗಿತ್ತು. ಈಗ ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ರಾಜ್ಯದ 1.2 ಕೋಟಿಗೂ ಅಧಿಕ ಕುಟುಂಬಗಳಿಗೆ ಜಮಾ ಮಾಡಲಾಗುತ್ತಿದೆ. ಆ ಹಣದಿಂದ ಸಾಕಷ್ಟು ಬಡ ಕುಟುಂಬಗಳ ಜೀವನ ಮಟ್ಟ ಸುಧಾರಣೆಗೊಂಡಿದೆ. ಅಲ್ಲದೆ, ನಮ್ಮ ಸರ್ಕಾರದ ಹಾಗೂ ತಮ್ಮಗಳ ಬಗ್ಗೆ ಶುಭ ಹಾರೈಕೆಯನ್ನು ಮಾಡುತ್ತಲೇ ಇದ್ದಾರೆ. ಈಗ ಪ್ರತಿ ತಿಂಗಳು ಮನೆಯ ಯಜಮಾನಿಯರ ಖಾತೆಗೆ ನಿಖರವಾಗಿ ತಲಾ 2 ಸಾವಿರ ರೂ. ಹಣ ಜಮಾ ಆಗುತ್ತಿರುವುದು ಖುಷಿಯ ವಿಚಾರವಾಗಿದೆ. ಅದೇ ರೀತಿ ಪ್ರತಿ ತಿಂಗಳ ಕಂತನ್ನು ಯಜಮಾನಿಯರಿಗೆ ಪಾವತಿಸುವ ಮೊದಲು ನಾಡದೇವಿ ಚಾಮುಂಡೇಶ್ವರಿಯ ಸನ್ನಧಿಗೂ ಸಲ್ಲಿಸಬೇಕು. ಆ ಮೂಲಕ ಮೊದಲ ಹಣ ನಾಡದೇವತೆಗೆ ಸಲ್ಲಿಕೆಯಾಗಿ ಬಳಿಕ ಉಳಿದವರಿಗೆ ಪಾವತಿಯಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News