ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣ: ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

ರನ್ಯಾ ರಾವ್
ಬೆಂಗಳೂರು : ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪೊಲೀಸ್ ಅಧಿಕಾರಿ ಪುತ್ರಿ, ನಟಿ ರನ್ಯಾ ರಾವ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ವಜಾಗೊಳಿಸಿದೆ.
ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ನಟಿ ರನ್ಯಾರಾವ್ ಅನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದರು. ಈಕೆ ನೀಡಿದ ಮಾಹಿತಿ ಆಧಾರಿಸಿ ತರುಣ್ ರಾಜ್‍ನನ್ನು ತನಿಖಾಧಿಕಾರಿಗಳು ಬಂಧಿಸಿದ್ದರು.
ಶುಕ್ರವಾರ ರನ್ಯಾ ರಾವ್ ಪರವಾಗಿ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿದರೆ, ಡಿಆರ್‌ಐ ಪರವಾಗಿ ಮಧು ರಾವ್ ವಾದ ಮಂಡಿಸಿದ್ದರು. ಆದರೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಈ ಪ್ರಕರಣದಲ್ಲಿ ವಾದ-ಪ್ರತಿವಾದಗಳನ್ನು ಆಲಿಸಿ, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.
ಅದರಂತೆ ಕೋರ್ಟ್ ರನ್ಯಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದು, ನ್ಯಾಯಾಂಗ ಬಂಧನದಲ್ಲಿಯೇ ರನ್ಯಾ ಉಳಿಯಬೇಕಿದೆ. ಜತೆ ಜಾಮೀನಿಗಾಗಿ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ.
ಇದೇ ವೇಳೆ, ಪ್ರಕರಣದ ಎರಡನೆ ಆರೋಪಿ ತರುಣ್ ರಾಜ್ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತರುಣ್ ರಾಜ್ ಮನವಿಗೆ ಆಕ್ಷೇಪಣೆ ಸಲ್ಲಿಸಲು ಡಿಆರ್‌ಐ ಪರ ವಕೀಲರು ಕಾಲಾವಕಾಶ ಕೇಳಿದ್ದಾರೆ. ತರುಣ್ ರಾಜ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಾಳೆ(ಶನಿವಾರ) ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಿರುವ ನ್ಯಾಯಾಲಯ, ಆಕ್ಷೇಪಣೆ ಸಲ್ಲಿಸುವಂತೆ ಡಿಆರ್‌ಐ ಅಧಿಕಾರಿಗಳಿಗೆ ಸೂಚಿಸಿದೆ.
14 ದಿನ ನ್ಯಾಯಾಂಗ ಬಂಧನ: ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾ ರಾವ್ ಆಪ್ತ ಮತ್ತು 2ನೆ ಆರೋಪಿಯಾಗಿರುವ ತರುಣ್ ರಾಜ್‍ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆರ್ಥಿಕ ಅಪರಾಧಗಳ ಕೋರ್ಟ್ ಆದೇಶ ಹೊರಡಿಸಿದೆ.
ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ತರುಣ್‌ನನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆ ವಿಚಾರಣೆ ನಡೆಸಿದ ನ್ಯಾಯಪೀಠ, ತರುಣ್ ರಾಜ್‍ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಆದೇಶ ಹೊರಡಿಸಿದೆ.