ವಿಧಾನ ಮಂಡಲ ಅಧಿವೇಶನದಲ್ಲಿ ವಿಪಕ್ಷಗಳ ಎಲ್ಲ ಪ್ರಶ್ನೆಗೆ ಸರಕಾರ ಉತ್ತರಿಸಲಿದೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ, ಡಿ.4: ಇಂದು ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು:
ಪಂಚರಾಜ್ಯ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಪೇಕ್ಷಿತ ಯಶಸ್ಸು ಸಾಧ್ಯವಾಗದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಧ್ಯಪ್ರದೇಶ ರಾಜ್ಯದಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯವರೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ. ಕಾಂಗ್ರೆಸ್ ಸರಕಾರ ಎಂದಿಗೂ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವುದಿಲ್ಲ. ಬಡಜನರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಪ್ರಾಮಾಣಿಕತೆಯಿಂದ ಇವುಗಳನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು ಎಂದರು.
ವಿರೋಧಪಕ್ಷದವರಿಗೆ ಪ್ರಶ್ನಿಸುವ ನೈತಿಕತೆ ಇಲ್ಲ:
ಈ ಬಾರಿ ವಿರೋಧ ಪಕ್ಷದವರು ಜಂಟಿಯಾಗಿ ಹೋರಾಟ ಕೈಗೊಳ್ಳಲಿದ್ದಾರೆ ಎಂಬುದಕ್ಕೆ ಪ್ರತಿಕ್ರಯಿಸುತ್ತಾ, ಸರಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಿರಲಿಲ್ಲ. ವಿರೋಧ ಪಕ್ಷದವರಿಗೆ ಸರಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ. ಅವರು ಜಂಟಿಯಾಗಿ ಹೋರಾಟ ನಡೆಸಿದರೂ, ಅವರ ಎಲ್ಲ ಹೋರಾಟಗಳಿಗೆ ಸರ್ಕಾರ ಸಿದ್ಧವಿದೆ ಎಂದರು.