ನಟ ದರ್ಶನ್ ಪ್ರಕರಣದಲ್ಲಿ ಸರಕಾರ ಮಧ್ಯಪ್ರವೇಶ ಮಾಡುವುದಿಲ್ಲ: ಗೃಹ ಸಚಿವ ಡಾ.ಜಿ. ಪರಮೇಶ್ವರ್

Update: 2024-06-12 14:46 GMT

ಬೆಂಗಳೂರು: ಯುವಕನ ಹತ್ಯೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪ್ರಕರಣದಲ್ಲಿ ರಾಜ್ಯ ಸರಕಾರ ಮಧ್ಯಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ. ಪೊಲೀಸರು ಕಾನೂನು ರೀತಿಯ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಪ್ರಕರಣದಿಂದ ಬಚಾವ್ ಆಗಲು ಪ್ರಭಾವಿ ರಾಜಕಾರಣಿಯಿಂದ ಪ್ರಯತ್ನ ಮಾಡಿದ್ದರು ಎನ್ನುವ ಮಾತುಗಳು ಕೇಳಿಬಂದಿವೆ. ಆದರೆ, ನನಗೆ ಗೊತ್ತಿರುವಂತೆ ಯಾರು ಸಹ ಪ್ರಯತ್ನ ಮಾಡಿಲ್ಲ. ಕಾನೂನಿನಲ್ಲಿ ಏನೆಲ್ಲ ಕ್ರಮ ತೆಗೆದುಕೊಳ್ಳಲು ಅವಕಾಶವಿದೆ ಅದನ್ನು ಪೊಲೀಸರು ಮಾಡುತ್ತಾರೆ. ಇದರಲ್ಲಿ ಸರಕಾರದಿಂದ ನಾವ್ಯಾರು ಮಧ್ಯ ಪ್ರವೇಶಿಸುವುದಿಲ್ಲ. ಮುಕ್ತವಾಗಿ ತನಿಖೆ ನಡೆಸಲು ಪೊಲೀಸರಿಗೆ ಅವಕಾಶವಿದೆ ಎಂದು ತಿಳಿಸಿದರು.

ಕೊಲೆಯಾದ ರೇಣುಕಾಸ್ವಾಮಿ ಕುಟುಂಬ ವರ್ಗದ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುತ್ತೇನೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣದಲ್ಲಿ ಭಾಗಿಯಾಗಿದ್ದ 13 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಕರಣದ ತನಿಖೆಯನ್ನು ಬೇರೆ ಏಜೆನ್ಸಿಗೆ ಕೊಡುವ ಅಗತ್ಯವಿಲ್ಲ. ತನಿಖೆ ಪೂರ್ಣವಾದ ಬಳಿಕ ಎಲ್ಲ ಮಾಹಿತಿ ಗೊತ್ತಾಗುತ್ತದೆ. ಅಲ್ಲಿಯವರೆಗೆ ಈ ಬಗ್ಗೆ ಅಧಿಕಾರಿಗಳನ್ನು ನಾವು ಕೇಳುವುದಿಲ್ಲ, ಅವರೂ ನಮಗೆ ಹೇಳುವುದಿಲ್ಲ ಎಂದರು.

ನಟ ದರ್ಶನ್ ಅವರ ಘಟನೆಗಳು ಇದೇ ಮೊದಲಲ್ಲ. ಮಾಧ್ಯಮಗಳಲ್ಲಿ ಬಂದಿರುವುದನ್ನು ಗಮನಿಸಿದ್ದೇನೆ. ಪೊಲೀಸರು ತನಿಖೆ ಮಾಡುತ್ತಾರೆ. ತನಿಖೆ ನಂತರ ವರದಿಯಲ್ಲಿ ಏನು ಶಿಫಾರಸ್ಸು ಮಾಡುತ್ತಾರೆ ನೋಡಬೇಕು. ಪೊಲೀಸರಿಗೆ ಮುಕ್ತ ಅವಕಾಶ ಇದೆ ಎಂದು ಅವರು ಹೇಳಿದರು.

ಅದು ಅಲ್ಲದೆ, ಎಲ್ಲರಿಗೂ ಕಾನೂನು ಒಂದೇ. ನಟ ದರ್ಶನ್‍ಗು ಕಾನೂನು ಒಂದೇ, ಪರಮೇಶ್ವರ್ ಗೂ ಒಂದೇ ಕಾನೂನು. ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು ಎಂದ ಅವರು, ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅವರ ಆಪ್ತೆ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ದರ್ಶನ್ ದೂರು ಕೊಡಬಹುದಾಗಿತ್ತು. ಪೊಲೀಸರು ಕೂಡಲೇ ಕ್ರಮ ತೆಗೆದುಕೊಳ್ಳುತ್ತಿದ್ದರು. ಅದನ್ನು ಬಿಟ್ಟು, ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಎಂಬ ಮಾಹಿತಿ ಇದೆ. ದೂರು ಕೊಟ್ಟಿದ್ದರೆ ಇದೆಲ್ಲವನ್ನು ತಡೆಯಲು ಅವಕಾಶವಿತ್ತು ಎಂದು ಅವರು ಉಲ್ಲೇಖಿಸಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News