‘ಸಿ.ಟಿ.ರವಿ ಬಂಧನ’ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ?
Update: 2025-01-08 15:45 GMT
ಬೆಂಗಳೂರು : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿಯನ್ನು ಪೊಲೀಸರು ಬಂಧಿಸಿ, ರಾತ್ರಿ ಇಡೀ ಪೊಲೀಸ್ ವಾಹನದಲ್ಲಿ ಸುತ್ತಾಡಿಸಿದ ಘಟನೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವ ರಾಜ್ಯಪಾಲ, ಸಿ.ಟಿ.ರವಿ ತಮ್ಮನ್ನು ಭೇಟಿ ಮಾಡಿ ಘಟನೆಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿಯನ್ನು ನೀಡಿದ್ದಾರೆ. ಘಟನೆ ನಡೆದು ಇಷ್ಟು ದಿನಗಳಾದರೂ ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಯಾಕೆ ಶಿಸ್ತು ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಸಿ.ಟಿ.ರವಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ರಾಜ್ಯಪಾಲ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.