‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ಕ್ಕೆ ರಾಜ್ಯಪಾಲರ ಒಪ್ಪಿಗೆ

Update: 2025-04-24 20:17 IST
‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ಕ್ಕೆ ರಾಜ್ಯಪಾಲರ ಒಪ್ಪಿಗೆ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

  • whatsapp icon

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯನ್ನು ವಿಸ್ತರಿಸುವುದು ಹಾಗೂ ಬೆಂಗಳೂರಿಗೆ ಸಂಬಂಧಿಸಿದಂತೆ ಗರಿಷ್ಠ ಏಳು ನಗರ ಪಾಲಿಕೆಗಳನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿರುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024ಕ್ಕೆ ಬುಧವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ನೀಡಿದ್ದು, ಅದನ್ನು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

ವಿಧಾನಮಂಡಲದ ಉಭಯ ಸದನಗಳಲ್ಲಿ ಸುದೀರ್ಘವಾಗಿ ಚರ್ಚೆ ನಡೆದು, ಆನಂತರ ಸದನ ಸಮಿತಿಗೆ ಶಿಫಾರಸ್ಸುಗೊಂಡಿದ್ದ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಕಳೆದ ಅಧಿವೇಶನದಲ್ಲಿ ತಿದ್ದುಪಡಿಗಳೊಂದಿಗೆ ಅಂಗೀಕರಿಸಿ, ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ರಚಿಸಲಾಗುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಬೆಂಗಳೂರು ಅಭಿವೃದ್ಧಿ ಮಂತ್ರಿ ಉಪಾಧ್ಯಕ್ಷ, ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿನ ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವ ರಾಜ್ಯ ಸರಕಾರದ ಮಂತ್ರಿಗಳು, ನಗರಾಭಿವೃದ್ಧಿ ಸಚಿವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರ ಪದನಿಮಿತ್ತ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ, ಬೆಂಗಳೂರು ಮಹಾನಗರ ಸಾರಿಗೆ ನಿಮಗದ ವ್ಯವಸ್ಥಾಪಕ ನಿರ್ದೇಶಕ, ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ, ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ, ಕ್ಷೇತ್ರ ವ್ಯಾಪ್ತಿಯ ಕಂದಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪದನಿಮಿತ್ತ ಸದಸ್ಯರಾಗಿರುತ್ತಾರೆ.

ಯಾವುದೇ ನಗರ ಪಾಲಿಕೆಗಳ ಭಾಗಶಃ ಅಥವಾ ಸಂಪೂರ್ಣ ಅಧಿಕಾರ ವ್ಯಾಪ್ತಿಯನ್ನು ಒಳಗೊಂಡ ಪೊಲೀಸ್ ಅಧೀಕ್ಷಕರು, ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ನಗರ ಯೋಜಕರು, ಮುಖ್ಯ ಅಭಿಯಂತರರು, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿರ್ದೇಶಕ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಹಾನಗರ ಆಯುಕ್ತ ಪದನಿಮಿತ್ತ ಸದಸ್ಯರಾಗಿರುತ್ತಾರೆ.

ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿನ ನಗರ ಪಾಲಿಕೆಗಳ ಆಯುಕ್ತರು, ಈ ಪ್ರಾಧಿಕಾರದ ಪ್ರದೇಶದಲ್ಲಿ ವಾಸಿಸುವ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು, ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಎಲ್ಲ ಸದಸ್ಯರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸದಸ್ಯರಾಗಿರುತ್ತಾರೆ.

ಉದ್ದೇಶಗಳು: ಗ್ರೇಟರ್ ಬೆಂಗಳೂರು ಪ್ರದೇಶದ ಅಭಿವೃದ್ಧಿಯ ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಸ್ಥಾಪಿಸುವುದು. ಪರಿಣಾಮಕಾರಿಯಾದ, ಸಹಭಾಗಿತ್ವದ ಮತ್ತು ಸ್ಪಂದನಶೀಲ ಆಡಳಿತಕ್ಕಾಗಿ ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಏಳಕ್ಕಿಂತ ಹೆಚ್ಚಿಲ್ಲದಂತೆ ನಗರ ಪಾಲಿಕೆಗಳನ್ನು ಸ್ಥಾಪಿಸುವುದು.

ವಾರ್ಡ್ ಸಮಿತಿಗಳನ್ನು, ನಗರಾಡಳಿತ ಮೂಲ ಘಟಕಗಳನ್ನಾಗಿಸಲು ಹಾಗೂ ಸಮುದಾಯ ಪಾಲ್ಗೊಳ್ಳುವಿಕೆಯನ್ನು ಸುಗಮಗೊಳಿಸಲು ಅವುಗಳನ್ನು ಸಶಕ್ತಗೊಳಿಸುವುದು. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿನ ಎಲ್ಲಾ ಸೇವಾ ವಿತರಣಾ ಸಾರ್ವಜನಿಕ ಪ್ರಾಧಿಕಾರಿಗಳ ರಾಜಕೀಯ ಉತ್ತರದಾಯಿತ್ವವನ್ನು ಸಂಯೋಜಿಸಲು ಮತ್ತು ಸುವ್ಯವಸ್ಥಿತಗೊಳಿಸುವ ಉದ್ದೇಶ ಹೊಂದಿದೆ.

ಬೆಂಗಳೂರಿಗಾಗಿ ವಿಕೇಂದ್ರೀಕೃತ ಸಹಭಾಗಿ, ದಕ್ಷ ಮತ್ತು ನ್ಯಾಯ ಸಮ್ಮತ ಆಡಳಿತ ಕಾರ್ಯಚೌಕಟ್ಟನ್ನು ಸ್ಥಾಪಿಸುವ ಮೂಲಕ ಎಲ್ಲಾ ನಾಗರಿಕರ ಜೀವನದ ಗುಣಮಟ್ಟವನ್ನು ಸುಧಾರಿಸುವ ಉದ್ದೇಶವನ್ನು ಈ ವಿಧೇಯಕ ಹೊಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News