ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು : ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-08-31 10:09 GMT

ಕಾಂಗ್ರೆಸ್‌ ನಾಯಕರಿಂದ ರಾಜಭವನ ಚಲೋ (PC : x/@DKShivakumar)

ಬೆಂಗಳೂರು: “ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ ಅಭಿಲಾಷೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ರಾಜ್ಯಪಾಲರ ಪಕ್ಷಪಾತ ಧೋರಣೆ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಶನಿವಾರ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಮೊದಲು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯಾಪಾಲರ ವಿರುದ್ಧ ಘೋಷಣೆ ಕೂಗಿದರು.

ನಂತರ ಕಾಲ್ನಡಿಗೆ ಮೂಲಕ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ಪಕ್ಷದ ನಿಯೋಗವು ಲೋಕಾಯುಕ್ತ ಎಸ್ ಐಟಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿಚಾರಣೆಗೆ ಅನುಮತಿ ನೀಡಿ ಎಂದು ಸಲ್ಲಿಸಿರುವ ಮನವಿಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.

ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು "ರಾಜ್ಯಪಾಲರು ನಮಗೆ ಟೀ, ಕಾಫಿ ಮತ್ತು ಉಪಹಾರವನ್ನು ಕೊಟ್ಟು ಉಪಚರಿಸಿದರು. ಎಲ್ಲದಕ್ಕಿಂತ ಮುಖ್ಯವಾಗಿ ನಿಮಗೆ ನ್ಯಾಯ ನೀಡುತ್ತೇವೆ ಎಂದು ಭರವಸೆ ನೀಡಿದರು" ಎಂದು ತಿಳಿಸಿದರು.

"ಲೋಕಾಯುಕ್ತ ಎಸ್ ಐಟಿ ಅವರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರಮಂತ್ರಿ ಕುಮಾರಸ್ವಾಮಿ ಹಾಗೂ ಮೂರು ಜನ ಮಾಜಿ ಮಂತ್ರಿಗಳ ಅಕ್ರಮಗಳ ವಿರುದ್ಧ ನ್ಯಾಯಾಲಯದ ಸೂಚನೆಯಂತೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡಿದ್ದಾರೆ. ಆದರೂ ಏನೂ ಕ್ರಮ ತೆಗೆದುಕೊಂಡಿಲ್ಲ. ನಮ್ಮ ಮುಖ್ಯಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳಲು ಮುಂದಾಗುವ ರಾಜ್ಯಪಾಲರು, ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ" ಎಂದು ಪ್ರಶ್ನಿಸಿದರು.

"ನಾಲ್ಕು ಜನರ ವಿರುದ್ಧ ಭ್ರಷ್ಟಾಚಾರ ವಿರೋಧಿ ಕಾಯ್ದೆ, 197 ಸಿಪಿಸಿ ಕಾಯ್ದೆಯಡಿ ಸೆಕ್ಷನ್ 17 ಎ ಪ್ರಕಾರ ಲೋಕಾಯುಕ್ತವು ಅನುಮತಿ ಕೇಳಿತ್ತು. ಆದರೂ ರಾಜ್ಯಪಾಲರು ಕ್ರಮ ತೆಗೆದುಕೊಳ್ಳಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಯಾರೋ ಅರ್ಜಿ ಕೊಟ್ಟರು ಎಂದು ಒಂದೇ ದಿನದಲ್ಲಿ ತೀರ್ಮಾನ ತೆಗೆದುಕೊಂಡರು. ಆದರೆ ಮಾಜಿ ಮುಖ್ಯಮಂತ್ರಿಗಳ, ಮಂತ್ರಿಗಳ ವಿಚಾರದಲ್ಲಿ ಲೋಕಾಯುಕ್ತ ಈ ಹಿಂದೆ ಮನವಿ ಮಾಡಿದಾಗ ಎಂಟತ್ತು ದಿನಗಳಲ್ಲಿ ತನಿಖೆಗೆ ಅನುಮತಿ ನೀಡುವ ತೀರ್ಮಾನ ಮಾಡಬಹುದಿತ್ತು. ಆದರೂ ಪಕ್ಷಪಾತ ಮಾಡಿದ್ದಾರೆ. ಮುಖ್ಯಮಂತ್ರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಡಿ ಎಂದು ಸಚಿವ ಸಂಪುಟ ಮನವಿ ಮಾಡಿತ್ತು. ರಾಜ್ಯಪಾಲರು ಅದನು ಮಾನ್ಯ ಮಾಡಲಿಲ್ಲ" ಎಂದು ಹೇಳಿದರು.

"ಮುಖ್ಯಮಂತ್ರಿಗಳ ವಿರುದ್ಧ ಯಾವುದೇ ಪೂರಕ ದಾಖಲೆಗಳಿಲ್ಲ. ಕುಮಾರಸ್ವಾಮಿ ಅವರು ಸೇರಿದಂತೆ ಮೂರು ಜನ ಮಂತ್ರಿಗಳ ವಿರುದ್ಧ ದಾಖಲೆ ಇದ್ದರೂ ರಾಜ್ಯಪಾಲರು ಪಕ್ಷಪಾತ ಏಕೆ ಮಾಡಿದರು. ರಾಜ್ಯಪಾಲರ ಕಚೇರಿ ಸಮಾನತೆ ಹೆಸರಾಗಿರಬೇಕು. ಸಾಂವಿಧಾನಿಕ ಪೀಠಕ್ಕೆ ಇರುವ ಗೌರವ ಉಳಿಯಬೇಕು. ಎಂದು ನಾವು ರಾಜಭವನ ಚಲೋ ಮಾಡಿದ್ದೇವೆ. ನ್ಯಾಯದ ಪರವಾಗಿ ಧ್ವನಿ ಎತ್ತಲು ನಾವು ಮುಂದಾಗಿದ್ದೇವೆ." ಎಂದು ಹೇಳಿದರು.

"ನನ್ನ ಬಳಿ ಯಾವುದೇ ಪ್ರಕರಣಗಳ ಬಾಕಿ ಇಲ್ಲ ಎಂದು ರಾಜ್ಯಪಾಲರು ತಿಳಿಸಿದ್ದಾರೆ. ರಾಜ್ಯಪಾಲರು ಏಕೆ ಹೀಗೆ ಹೇಳುತ್ತಿದ್ದಾರೆ ಎಂದು ಮತ್ತೊಮ್ಮೆ ಪರಿಶೀಲನೆ ಮಾಡಲಾಗುವುದು. ಇದು ನಿಜವೋ ಸುಳ್ಳೋ ಕಳಿಸಿರುವುದು ನಿಜವೋ, ಸುಳ್ಳು ಎಂದು ಪರಿಶೀಲಿಸಲಾಗುವುದು. ಅಥವಾ ಒಂದಷ್ಟು ವಿಚಾರದಲ್ಲಿ ಅವರು ಸ್ಪಷ್ಟನೆ ಕೇಳಿರಬಹುದು ಇದನ್ನು ಸಹ ನಾವು ಪರಿಶೀಲಿಸುತ್ತೇವೆ" ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News