ವಸತಿ ಶಾಲಾ ಶಿಕ್ಷಕರ ನೇಮಕಾತಿಗೆ ಸರಕಾರ ಅನುಮೋದನೆ
ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 875 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ರಾಜ್ಯ ಸರಕಾರವು ಅನುಮೋದನೆ ನೀಡಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಕ್ಕೆ ಮಂಜೂರಾದ ಬೋಧಕ ಹುದ್ದೆಗಳ ಕನಿಷ್ಠ ಶೇ.20ರಷ್ಟು ಹುದ್ದೆಗಳನ್ನು ಶಿಕ್ಷಣ ಇಲಾಖೆಯಿಂದ ನಿಯೋಜನೆ ಮೂಲಕ ಭರ್ತಿ ಮಾಡಲು ಅನುಕೂಲವಾಗುವಂತೆ ಸಂಸ್ಥೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಮಾರ್ಪಡಿಸಿಕೊಳ್ಳತಕ್ಕದ್ದು ಎಂದು ಷರತ್ತು ವಿಧಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಏಕಲವ್ಯ ಮಾದರಿ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 875 ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.
ಕನ್ನಡ ಶಿಕ್ಷಕ 100 ಹುದ್ದೆಗಳನ್ನು, ಇಂಗೀಷ್ ಶಿಕ್ಷಕ 100, ಹಿಂದಿ ಶಿಕ್ಷಕ 50, ಗಣಿತ ಶಿಕ್ಷಕ 100, ವಿಜ್ಞಾನ ಶಿಕ್ಷಕ 100, ಸಮಾಜ ಶಿಕ್ಷಕ 150, ಕಂಪ್ಯೂಟರ್ ಸೈನ್ಸ್ ಶಿಕ್ಷಕ 50, ದೈಹಿಕ ಶಿಕ್ಷಕ 75, ಎಫ್‍ಡಿಎ ಕಂ ಕಂಪ್ಯೂಟರ್ ಆಪರೇಟರ್ 75, ವಾರ್ಡನ್ 75 ಸೇರಿ ಒಟ್ಟು 875 ಹುದ್ದೆಗಳನ್ನು ಭರ್ತಿ ಮಾಡಲು ಒಪ್ಪಿಗೆ ಕೊಡಲಾಗಿದೆ.