ಸರಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ:‌ ಬಸವರಾಜ ಬೊಮ್ಮಾಯಿ ಆಗ್ರಹ

Update: 2023-08-31 08:30 GMT

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ‌ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್ ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ. ಆದರೂ, ಅದರ ವಿರುದ್ದ ಯಾವುದೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಿಲ್ಲ.

ಈಗ ಸಿಡಬ್ಲುಎಂಎ ಸೂಚನೆ ಮೇರೆಗೆ 5000 ಕ್ಯುಸೆಕ್ಸ್ ನೀರು ಬಿಡಲು ಪ್ರಾರಂಭ ಮಾಡಿದ ಮೇಲೆ ಡಿಸಿಎಂ ಅವರು ಕಾನೂನು ತಜ್ಞರ ಜೊತೆ ಚರ್ಚೆ ಮಾಡುವುದರಲ್ಲಿ ಯಾವ ಅರ್ಥ ಇದೆ ಎಂದು ಪ್ರಶ್ನಿಸಿದ್ದಾರೆ.

ಹಿಂದಿನ ಆದೇಶದ ವಿರುದ್ದ ಈಗಾಗಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕಾಗಿತ್ತು. ಅದು ಕೂಡ ಮಾಡಿಲ್ಲ. ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಅರ್ಥವಿಲ್ಲ. ಕೂಡಲೇ ನೀರು ನಿಲ್ಲಿಸಿ‌ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಆಗ್ರಹ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News