ಬಿಜೆಪಿ ನಾಯಕರಿಗೆ ಮುಖಭಂಗ ಮಾಡಲು ಯತ್ನಾಳ್ ಹೋರಾಟ : ಜಿ.ಪರಮೇಶ್ವರ್

Update: 2024-11-25 07:28 GMT

ಜಿ.ಪರಮೇಶ್ವರ್‌

ಬೆಂಗಳೂರು : "ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಕ್ಫ್ ವಿಚಾರದಲ್ಲಿ ಬಿಜೆಪಿಯವರಿಗೆ ಮುಖಭಂಗ ಮಾಡಲು ಹೋರಾಟಕ್ಕೆ ಮುಂದಾಗಿದ್ದಾರೆ. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಹೆಚ್ಚು ನೋಟಿಸ್ ಕೊಟ್ಟಿರುವುದು ಗೊತ್ತಾಗಿಯೇ ಬಿಜೆಪಿಯವರಿಗೆ ಮುಜುಗರ ಮಾಡಲು ಹೋರಾಟ ಮಾಡುತ್ತಿದ್ದಾರೆ" ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದರು.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼನಾವು ವಿರೋಧ ಪಕ್ಷದಲ್ಲಿದ್ದಾಗ ರೈತರಿಗೆ ನೋಟಿಸ್ ನೀಡಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಹಾಗಾಗಿ ನಾವು ಆ ವಿಚಾರವನ್ನು ಕೈಗೆತ್ತಿಕೊಂಡಿಲ್ಲ. ಈಗ ನಮ್ಮ ಗಮನಕ್ಕೆ ಬಂದಿದೆ. ಎಚ್ಚರಿಕೆ ವಹಿಸಿಕೊಂಡು ಕೆಲಸ ಮಾಡುತ್ತೇವೆʼ ಎಂದು ಹೇಳಿದರು.

ʼಸತ್ಯ ಯಾವತ್ತೂ ಹೆಚ್ಚು ದಿನ ಮುಚ್ಚಿಡಲು ಆಗುವುದಿಲ್ಲ. ರೈತರಿಗೆ ನೋಟಿಸ್ ಕೊಡ್ಡಿದ್ದೇವೆ ಎಂದು ನಮ್ಮ ಸರಕಾರದ ಮೇಲೆ ಆಪಾದನೆ ಮಾಡುತ್ತಿದ್ದರು. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ರೈತರಿಗೆ ಹೆಚ್ಚು ನೋಟಿಸ್ ನೀಡಲಾಗಿದೆ. ಈಗ ಬಿಜೆಪಿಯವರು ಏನು ಹೇಳುತ್ತಾರೆʼ ಎಂದು ಪ್ರಶ್ನಿಸಿದರು.

ʼಮಾಜಿ ಶಾಸಕ ಕುಮಾರ್ ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿ ನೋಟಿಸ್ ಜಾರಿ ಮಾಡಿದ್ದಾರೆ. ಸುಮಾರು 2900 ಎಕರೆಗೆ ನೋಟಿಸ್ ನೀಡಿದ್ದಾರೆ. ಸಿದ್ದರಾಮಯ್ಯನವರ ಕಾಲದಲ್ಲಿ ಕೇವಲ 300 ಎಕರೆಗೆ ನೋಟಿಸ್ ನೀಡಲಾಗಿದೆ. ವಕ್ಫ್ ವಿಚಾರವನ್ನಿಟ್ಟುಕೊಂಡು ರಾಜ್ಯ ಸುತ್ತಲು ಹೊರಟಿರುವ ಬಿಜೆಪಿ ನಾಯಕರು, ಯಾರು ಜಾಸ್ತಿ ನೋಟಿಸ್ ನೀಡಿದ್ದು? ಯಾರ ಮೇಲೆ‌ ಆಪಾದನೆ ಮಾಡಬೇಕು? ಎಂಬುದನ್ನು ಈಗಲಾದರೂ ಅರ್ಥ ಮಾಡಿಕೊಳ್ಳಬೇಕುʼ ಎಂದರು.

ಗೆದ್ದರೆ ಜನಾದೇಶ,‌ ಸೋತರೆ ಇವಿಎಂ ದೋಷ ಎಂಬ ಸಿ.ಟಿ.ರವಿ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ʼನಾವು ಮೊದಲಿಂದಲೂ ಹೇಳುತ್ತಿದ್ದೇವೆ, ಗೆದ್ದಾಗಲೂ ಹೇಳಿದ್ದೇವೆ. ನಾನು ಹೇಳಿದ್ದು ಏನು ಅಂತ ಸರಿಯಾಗಿ ಅರ್ಥಮಾಡಿಕೊಳ್ಳಲು ಹೇಳಿ. ಇವಿಎಂ ದುರ್ಬಳಕೆ ಸೆಲೆಕ್ಟಿವ್ ಆಗಿ ಮಾಡುತ್ತಾರೆ. ಸೆಲೆಕ್ಟೀವ್ ಆಗಿ ರಾಜ್ಯ ಆಯ್ಕೆ ಮಾಡುತ್ತಾರೆ, ಸೆಲೆಕ್ಟಿವ್ ಆಗಿ ಕ್ಷೇತ್ರ ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದೇವೆ. ನಾವು ಹೊಸದಾಗಿ ಹೇಳುತ್ತಿಲ್ಲ ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆʼ ಎಂದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News