ಆ.27ರಂದು ಗೃಹ ಲಕ್ಷ್ಮಿ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ: ಡಿಸಿಎಂ ಡಿ.ಕೆ.ಶಿವಕುಮಾರ್

Update: 2023-08-10 18:36 GMT

ಬೆಂಗಳೂರು, ಆ.10: ರಾಜ್ಯ ಸರಕಾರದ ಗ್ಯಾರಂಟಿಗಳ ಪೈಕಿ "ಬಹುನಿರೀಕ್ಷಿತ' ಗೃಹಲಕ್ಷ್ಮೀ ಯೋಜನೆಯನ್ನು ಆ.27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಲಾಗುತ್ತದೆ ಎಂದು ಹೇಳಿದರು.

ಇನ್ನೂ, ಅಂದೇ ರಾಜ್ಯದ 11 ಸಾವಿರ ಕಡೆಗಳಲ್ಲಿ ಏಕಕಾಲಕ್ಕೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು. ಪ್ರತಿಯೊಂದು ಗ್ರಾಮ ಪಂಚಾಯತ್, ನಗರಸಭೆ, ಪುರಸಭೆಗಳಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಈ ಸಂಬಂಧ ಪಂಚಾಯತಿಗೊಬ್ಬರಂತೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ ಎಂದೂ ಅವರು ಮಾಹಿತಿ ನೀಡಿದರು.

ಸುಮಾರು 1.5 ಕೋಟಿ ಗೃಹಿಣಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಯೋಜನೆಗೆ ಯಾವಾಗ ಬೇಕಾದರೂ ನೋಂದಣಿ ಮಾಡಿಕೊಳ್ಳಬಹುದು ಎಂದು ಶಿವಕುಮಾರ್ ನುಡಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಪೌರಾಡಳಿತ ಖಾತೆ ಸಚಿವ ರಹೀಂ ಖಾನ್ ಸೇರಿದಂತೆ ಪ್ರಮುಖರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News