ಗೃಹಲಕ್ಷ್ಮಿ ಯೋಜನೆ: ಅರ್ಜಿ ಸಲ್ಲಿಸಲು ಹಣ ಪಡೆದ ಗ್ರಾಮ ಒನ್ ಸಿಬ್ಬಂದಿ; ಲಾಗಿನ್ ಐಡಿ ರದ್ದು
Update: 2023-07-23 16:19 GMT
ಬಾಗಲಕೋಟೆ, ಜು.23: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ‘ಗ್ರಾಮ ಒನ್’ ಕೇಂದ್ರದ ಸಿಬ್ಬಂದಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಲಾಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ''ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮವನ್ನು ಸರಕಾರ ಸಹಿಸುವುದಿಲ್ಲ. ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಕ್ಕೂ ಹಿಂಜರಿಯುವುದಿಲ್ಲ'' ಎಂದು ಎಚ್ಚರಿಕೆ ನೀಡಿದ್ದಾರೆ.