ರಾಜ್ಯ ಒಕ್ಕಲಿಗರ ಸಂಘ ಇಂದು ಗುಂಪುಗಾರಿಕೆಯಿಂದ ಸೊರಗುತ್ತಿದೆ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಸಮಾಜದ ಶ್ರೇಯೋಭಿವೃದ್ಧಿಗಾಗಿ ಉದಯವಾಗಿರುವ ರಾಜ್ಯ ಒಕ್ಕಲಿಗರ ಸಂಘ ಇಂದು ಗುಂಪುಗಾರಿಕೆಯಿಂದ ಸೊರಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ ಆಕ್ಷೇಪಿಸಿದ್ದಾರೆ.
ಶುಕ್ರವಾರ ಕೆಂಪೇಗೌಡ ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ಕೇಂದ್ರ ವೈದ್ಯಕೀಯ ಮಂಡಳಿಯಿಂದ ಹೆಚ್ಚುವರಿಯಾಗಿ 100 ಯುಜಿ ಹಾಗೂ 68 ಪಿಜಿ ಸೀಟುಗಳ ಮಂಜೂರು ಮಾಡಿಸಿಕೊಡುವಲ್ಲಿ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ, ಕೇಂದ್ರದ ಆರೋಗ್ಯ ಸಚಿವ ಜೆಪಿ ನಡ್ಡಾ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಒಕ್ಕಲಿಗರ ಸಂಘ ಪ್ರತಿದಿನ ಗುಂಪುಗಾರಿಕೆ ಮೂಲಕ ಹೊರಗಡೆ ಸಂಘದ ಬಗ್ಗೆ ಜನ ಲಘುವಾಗಿ ಮಾತನಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ. ಮೂರು ತಿಂಗಳು, ಆರು ತಿಂಗಳಿಗೆ ಒಮ್ಮೆ ಪದಾಧಿಕಾರಿಗಳನ್ನು ಬದಲಾವಣೆ ಮಾಡಿಕೊಂಡು ಗುಂಪುಗಾರಿಕೆ ನಡೆಸಿದರೆ ಸಂಘದ ಗತಿ ಏನು? ಎಂದು ಪ್ರಶ್ನಿಸಿಸದರು.
ಹೃದಯ ವೈಶಾಲ್ಯತೆ ಇರುವ ಸಮಾಜ ನಮ್ಮದು, ಎಲ್ಲರೂ ನಮ್ಮಂತೆಯೇ ಬದುಕಬೇಕು ಎಂದು ಬಯಸುವ ಸಮಾಜ ನಮ್ಮದು. ಆದರೆ, ನಾವೇ ಮಾಡಿಕೊಳ್ಳುತ್ತಿರುವ ತಪ್ಪುಗಳಿಂದ ನಾವು ಎಲ್ಲೋ ಅಲ್ಪಸಂಖ್ಯಾತರಾಗುತ್ತಿದ್ದೇವೇ ಎನ್ನುವ ಆತಂಕ ನನಗೆ ಉಂಟಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಮೂರು ತಿಂಗಳು, ಆರು ತಿಂಗಳಿಗೊಮ್ಮೆ ಸಂಘದ ಪದಾಧಿಕಾರಿಗಳ ಬದಲಾವಣೆ ಸರಿ ಅಲ್ಲ, ದೇಶ ವಿದೇಶಕ್ಕೆ ಕರೆದುಕೊಂಡು ಹೋಗಿ ಗುಂಪುಗಾರಿಕೆ ಮಾಡಬೇಡಿ. ಇದೆಲ್ಲಾ ಯಾವ ಪುರುಷಾರ್ಥಕ್ಕೆ? ನೀವು ಸಮಾಜಕ್ಕೆ ಏನು ಕೊಡುಗೆ ಕೊಡುತ್ತೀರಿ? ನಿಮ್ಮನ್ನು ನಂಬಿ ಮತ ಹಾಕಿ ಕಳಿಸಿದ ಜನರ ಬಗ್ಗೆ ಆಲೋಚನೆ ಮಾಡಿದ್ದೀರಾ? ಎಂದು ಅವರು ಹೇಳಿದರು.
ಸಮಾರಂಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ವಿಜಯನಗರ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಸೇರಿದಂತೆ ಪ್ರಮುಖರಿದ್ದರು.