ಮೈಸೂರಿನ ಪಿಕೆಟಿಬಿ ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೆ ತಪ್ಪಿಲ್ಲ : ಜಿ.ಟಿ.ದೇವೇಗೌಡ
ಮೈಸೂರು : ಮೈಸೂರಿನ ಪ್ರಮುಖ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡಲು ಮೈಸೂರು ನಗರ ಪಾಲಿಕೆ ಮುಂದಾಗಿದ್ದು, ಇದಕ್ಕೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹೆಸರಿಡುವ ಪಾಲಿಕೆಯ ತೀರ್ಮಾನಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಬಲ ಸೂಚಿಸಿದ್ದರು. ಇದೀಗ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಕೂಡ ಮೈಸೂರಿನ ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೆ ತಪ್ಪಿಲ್ಲ ಎಂದು ಹೇಳುವ ಮೂಲಕ ಪಾಲಿಕೆಯ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತಾನಾಡಿದ ಜಿ.ಟಿ.ದೇವೇಗೌಡ ಅವರು," ಮೈಸೂರಿನ ಪಿಕೆಟಿಬಿ (ಪ್ರಿನ್ಸಸ್ ಕೃಷ್ಣರಾಜಮಣಿ ಟ್ಯೂಬಕ್ರ್ಯುಲೋಸಿಸ್ ಹಾಸ್ಪೆಟಲ್) ರಸ್ತೆಗೆ ಪ್ರಿನ್ಸೆಸ್ ರಸ್ತೆ ಅಂತ ನಾಮಕರಣ ಮಾಡಿಲ್ಲ ಅನ್ನುವುದಾದರೆ ಸಿದ್ದರಾಮಯ್ಯ ಅವರ ಹೆಸರನ್ನು ಇಟ್ಟರೆ ತಪ್ಪಿಲ್ಲ. ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಸಂಸದ ಯದುವೀರ್ ಅವರು ಹೇಳುವಂತೆ ಆ ರಸ್ತೆಗೆ ಪ್ರಿನ್ಸಸ್ ರಸ್ತೆ ಎಂದು ಹೆಸರಿಡಲಾಗಿದೆ ಎನ್ನುತ್ತಾರೆ. ಆದರೆ ಮತ್ತೆ ಕೆಲವರು ಆ ರಸ್ತೆಗೆ ಯಾವ ಹೆಸರನ್ನು ಇಟ್ಟಿಲ್ಲ ಎನ್ನುತ್ತಾರೆ. ಒಂದು ವೇಳೆ ಆ ರಸ್ತೆಗೆ ಹೆಸರಿಟ್ಟಲ್ಲದಿದ್ದರೆ ಸಿದ್ದರಾಮಯ್ಯ ಅವರ ಹೆಸರು ಇಟ್ಟರೆ ತಪ್ಪಿಲ್ಲ" ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮೈಸೂರಿನ ಸುಪುತ್ರ : ಪ್ರತಾಪ್ ಸಿಂಹ
"ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಎರಡು ಬಾರಿ ಸಿಎಂ ಆಗಿದ್ದಾರೆ. ಮೈಸೂರಿಗೆ ಶಾಶ್ವತ ಕೊಡುಗೆ ನೀಡಿದ್ದಾರೆ. ಅವರ ಹೆಸರಿಡುವುದು ತಪ್ಪಲ್ಲ. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೀಮಿತ ಮಾಡಬಾರದು. ಇದಕ್ಕೆ ವಿರೋಧ ಮಾಡುವುದು ಮೊಸರಲ್ಲಿ ಕಲ್ಲು ಹುಡುಕಿದಂತೆ. ಸಿದ್ದರಾಮಯ್ಯ ಹೆಸರಿಡುವ ಪ್ರಸ್ತಾವನೆಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ನವರು ಯಾರೂ ವಿರೋಧ ಮಾಡಬಾರದು ಎಂದು ಪ್ರತಾಪ್ ಸಿಂಹ ಹೇಳಿದ್ದರು.