ಬಿಬಿಎಂಪಿ ವ್ಯಾಪ್ತಿಯಲ್ಲಿ ʼಗ್ಯಾರಂಟಿʼಗಳ ಕುರಿತ ಕುಂದುಕೊರತೆಗಳನ್ನು ಆಲಿಸಲು ದೂರವಾಣಿ ಸಂಖ್ಯೆ ಬಿಡುಗಡೆ
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಕುಂದುಕೊರತೆಗಳನ್ನು ಆಲಿಸಲುವುದಕ್ಕಾಗಿ ದೂರವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದ್ದು, ಕರೆ ಮಾಡಿ ಗ್ಯಾರಂಟಿ ಯೋಜನೆಗಳ ಕುರಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಿ. ಕೃಷ್ಣಪ್ಪ ಹೇಳಿದ್ದಾರೆ.
ಬುಧವಾರ ಇಲ್ಲಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಾರ್ಯಸೂಚಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಕುಂದುಕೊರೆತೆಗಳಿಗೆ 9480683972 ಸಂಪರ್ಕ ಮಾಡಬಹುದು ಎಂದರು.
ಪಾಲಿಕೆ ವ್ಯಾಪ್ತಿಯಲ್ಲಿ 5 ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆ, ಗೃಹ ಜ್ಯೋತಿ ಯೋಜನೆ ಹಾಗೂ ಯುವ ಶಕ್ತಿ ಯೋಜನೆಗಳ ಕುರಿತಾಗಿ ಸಾರ್ವಜನಿಕರು ಅಗತ್ಯ ಮಾಹಿತಿ ಅಥವಾ ಸಮಸ್ಯೆಗಳನ್ನು ಹೇಳುವ ಸಲುವಾಗಿ ದೂರವಾಣಿ ಸಂಖ್ಯೆ ನೀಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಸಾರ್ವಜನಿಕರಿಂದ ಯಾವುದಾದರು ಅಹವಾಲು ಅಥವಾ ದೂರು ಬಂದರೆ ತಕ್ಷಣ ಸಂಬಂಧಪಟ್ಟ ಇಲಾಖೆಯ ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಿ, ಕುಂದುಕೊರತೆಗಳನ್ನು ಪರಿಶೀಲಿಸಬೇಕು. ಯಾವುದೇ ಅರ್ಹ ಫಲಾನುಭವಿಗಳು ಸರಕಾರದ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದಂತೆ ಸೂಕ್ತ ಕ್ರಮವಹಿಸಬೇಕು ಎಂದು ಅವರು ಸೂಚಿಸಿದರು.
ಈ ವೇಳೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಜನಾರ್ಧನ್, ರಮೇಶ್ ಹೆಚ್, ನೌಶೀರ್ ಅಹ್ಮದ್, ಬಿ.ಎಸ್ ಗೋಪಾಲ ಕೃಷ್ಣ ಸೇರಿ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.