ಹಾಸನ: ಕಾಲೇಜಿನ 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಹಾಸನ, ನ.2: ಕಾಲೇಜಿನ 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮದ್ಯಾಹ್ನ ವರದಿಯಾಗಿದೆ.
ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಸಮೀಪದ ಹೊನ್ನಶೆಟ್ಟಿಹಳ್ಳಿಯ ಮಾನ್ಯ (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಈಕೆ ಹಾಸನ ಹೊರವಲಯದ ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್ ಪದವಿ ಓದುತ್ತಿದ್ದಳು. ಇಂದು ಮೊದಲ ಪರೀಕ್ಷೆ ಬರೆದಿದ್ದು, ಪರೀಕ್ಷೆ ಸಮಯದಲ್ಲಿ ನಕಲು ಮಾಡಿದ್ದಾಗಿ ಆರೋಪಿಸಿ ಕಾಲೇಜು ಪ್ರಾಂಶುಪಾಲರಿಗೆ ಕ್ಷಮಾಪಣೆ ಪತ್ರ ಬರೆದುಕೊಡುವಂತೆ ಉಪನ್ಯಾಸಕರೊಬ್ಬರು ಹೇಳಿದ್ದರು ಎಂದು ಹೇಳಲಾಗಿದೆ. ಇದರಿಂದ ಬೇಸತ್ತು ವಿದ್ಯಾರ್ಥಿನಿ ಮಾನ್ಯ ಕಾಲೇಜಿನ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ವಿಚಾರ ತಿಳಿದ ಬಡಾವಣೆ ಪೊಲೀಸ್ ಸಿಬ್ಬಂದಿಗಳು ಬಂದು ಪರಿಶೀಲನೆ ನಡೆಸಿದ್ದಾರೆ.