ಶೌಚಾಲಯಗಳ ಕುರಿತು ವರದಿ ಸಲ್ಲಿಸದ ಸರಕಾರ: 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳನ್ನು ನಿರ್ಮಿಸಿ ವ್ಯವಸ್ಥೆ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ನಿರ್ದೇಶನದಂತೆ ವರದಿ ಸಲ್ಲಿಸದ ಸರಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಬುಧವಾರ ಐದು ಲಕ್ಷ ರೂಪಾಯಿ ದಂಡ ವಿಧಿಸಿದೆ.
ನಗರದ ಶೌಚಾಲಯಗಳ ಸ್ಥಿತಿಗತಿಗಳಿಗೆ ಸಂಬಂಧಿಸಿದಂತೆ ಲೆಟ್ಜ್‍ಕಿಟ್ ಫೌಂಡೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಆದೇಶ ಹೊರಡಿಸಿದೆ.
ಅಲ್ಲದೇ, ಬೆಂಗಳೂರಿನ ನಿವಾಸಿಗಳ ಬಗ್ಗೆ ಸರಕಾರ ಅತ್ಯಂತ ಜವಾಬ್ದಾರಿಯುತವಾಗಿರಬೇಕು. ವರದಿ ಸಲ್ಲಿಸುವಂತೆ ಈ ಹಿಂದೆ ಸೂಚನೆ ನೀಡಿದ್ದರೂ, ಸರಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈ ಸಂಬಂಧ ಸ್ಪಷ್ಟನೆ ನೀಡುವುದಕ್ಕಾಗಿ ಮುಂದಿನ ಅರ್ಜಿ ವಿಚಾರಣೆ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಿರಬೇಕು ಎಂದು ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿದೆ.
ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ನಗರದಲ್ಲಿ ಶೌಚಾಲಯಗಳ ಸಂಖ್ಯೆ ಅತ್ಯಂತ ಕಡಿಮೆಯಿದೆ. ಈ ಸಂಬಂಧ ಸರಕಾರಕ್ಕೆ ನಿರ್ದೇಶನ ನೀಡಿದ್ದರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಹಿಂದೆ ಅರ್ಜಿ ವಿಚಾರಣೆ ವೇಳೆ, ನಗರದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳ ಕಲ್ಪಿಸುವುದಕ್ಕೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಮುಂದಿನ ಮೂರು ವಾರಗಳಲ್ಲಿ ಪರಿಷ್ಕೃತ ವರದಿ ಸಲ್ಲಿಸುವಂತೆ ಕೋರಿತು. ಇದಕ್ಕೆ ಪ್ರತಿಕ್ರಿಯಿಸಿದ ಸರಕಾರದ ಪರ ವಕೀಲರು, ವರದಿ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ ದಂಡ ವಿಧಿಸಿ ಆದೇಶಿಸಿತು.