ಶಾಸಕತ್ವ ಅಸಿಂಧುಗೊಳಿಸುವಂತೆ ಕೋರಿ ಅರ್ಜಿ: ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

Update: 2023-07-28 13:49 GMT

ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕತ್ವ ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಮುಖ್ಯಮಂತ್ರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ನಿವಾಸಿ ಕೆ.ಎಂ.ಶಂಕರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ, ನೋಟಿಸ್ ಜಾರಿ ಮಾಡಿ ಸೆ.1ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಇದು ಲಂಚಕ್ಕೆ ಸಮವಾಗಿದ್ದು, ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123(1) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಹೀಗಾಗಿ, ಅಕ್ರಮಗಳನ್ನು ಎಸಗುವ ಮೂಲಕ ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಪೀಠಕ್ಕೆ ಕೋರಿದರು.

ಅಲ್ಲದೇ, ಕಾಂಗ್ರೆಸ್ ಪಕ್ಷ ಮತ್ತು ಅಭ್ಯರ್ಥಿ ಸಿದ್ದರಾಮಯ್ಯ ಅವರು ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವುಗಳು ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದೆ. ಆ ಮೂಲಕ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಅಕ್ರಮಗಳನ್ನು ಎಸಗಿದ್ದಾರೆ. ಜತೆಗೆ, ಚುನಾವಣಾ ಮಾದರಿ ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆಯೂ ಆಗಿದೆ. ಹೀಗಾಗಿ, ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News