ಪ್ರಜ್ವಲ್ ತಪ್ಪು ಮಾಡಿದ್ದರೆ ಕ್ರಮಕ್ಕೆ ಯಾವುದೇ ತಕರಾರು ಇಲ್ಲ : ಎಚ್.ಡಿ.ದೇವೇಗೌಡ

Update: 2024-05-18 08:32 GMT

ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂದಿಸಿದಂತೆ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ತಪ್ಪು ಮಾಡಿರುವುದು ಸಾಬೀತಾದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಿ. ಅದಕ್ಕೆ ನಮ್ಮ ತಕರಾರು ಇಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು.

ತಮ್ಮ 91ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ  ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

"ಪ್ರಜ್ವಲ್ ವಿರುದ್ಧದ ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದ್ದು, ಆತ ತಪ್ಪು ಮಾಡಿದ್ದಾನೆ ಎಂದು ತನಿಖೆಯಲ್ಲಿ ಸಾಬೀತಾದರೆ ಸರ್ಕಾರ ಕ್ರಮ ಕೈಗೊಳ್ಳಲಿ" ಎಂದು ಹೇಳಿದರು.

 ರೇವಣ್ಣ ಅವರಿಗೆ ಒಂದು ಪ್ರಕರಣದಲ್ಲಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಎಚ್.ಡಿ.‌ರೇವಣ್ಣ ವಿರುದ್ಧದ ಪ್ರಕರಣವನ್ನು ಸೃಷ್ಟಿಸಲಾಗಿದ್ದು, ಅದರ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ಈಗ‌ ಪ್ರತಿಕ್ರಿಯಿಸುವುದಿಲ್ಲ. ಇನ್ನೊಂದು ಪ್ರಕರಣದಲ್ಲಿ ಜಾಮೀನು ಅರ್ಜಿಯ ವಿಚಾರಣೆ ಪ್ರಗತಿಯಲ್ಲಿದೆ ಎಂದರು.

"ಪ್ರಜ್ವಲ್ ರೇವಣ್ಣ ಈಗ ವಿದೇಶಕ್ಕೆ ಹೋಗಿದ್ದಾರೆ. ಆ ಕುರಿತು ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಹಲವರಿದ್ದಾರೆ. ಎಲ್ಲರಿಗೂ ಶಿಕ್ಷೆ ಆಗಬೇಕು. ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಸಿಗಬೇಕು" ಎಂದು ಹೇಳಿದರು. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News