ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲರು?

Update: 2024-08-08 16:57 GMT

 ಎಚ್.ಡಿ.ಕುಮಾರಸ್ವಾಮಿ(PTI)/ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ, ಒಂದೇ ದಿನದಲ್ಲಿ ಸಿಎಂಗೆ ನೋಟೀಸ್ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಕಡತಕ್ಕೆ ಸಂಬಂಧಿಸಿದಂತೆ, ಕಳೆದ 10 ತಿಂಗಳಿನಿಂದ ಕಡತವನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್-ಬಿಜೆಪಿ ನೇತೃತ್ವದ ಸಮ್ಮಿಶ್ರ ಸರಕಾರದಲ್ಲಿ ಸಿಎಂ ಆಗಿದ್ದಾಗಿನ ಅಕ್ರಮ ಕಬ್ಬಿಣದ ಅದಿರು ಗಣಿಗಾರಿಕೆ ಪ್ರಕರಣದಲ್ಲಿ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಎಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಅಡಿಯಲ್ಲಿ ಕಾನೂನು ಕ್ರಮಕ್ಕಾಗಿ, ಕರ್ನಾಟಕ ಲೋಕಾಯುಕ್ತದ ವಿಶೇಷ ತನಿಖಾ ತಂಡದ (ಎಸ್‌ ಐ ಟಿ)ಯು ನವೆಂಬರ್ 21, 2023 ರಂದು ಅನುಮತಿ ಕೇಳಿತ್ತು. ಆದರೆ ರಾಜ್ಯಪಾಲರಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅಕ್ರಮ ಗಣಿಕಾರಿಗೆ ಸಂಬಂಧಿಸಿದ ಘಟನೆ ಇದಾಗಿದ್ದು, ಕುಮಾರಸ್ವಾಮಿಯವರು ಈಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ ಡಿ ಎ ಸರಕಾರದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ.

 

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ ಎಂಬ ಅಸ್ತಿತ್ವದಲ್ಲಿಲ್ಲದ ಸಂಸ್ಥೆಗೆ ಎಚ್‌.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ 6.10.2007ರಂದು ಬಳ್ಳಾರಿಯ ಸಂಡೂರು ತಾಲೂಕಿನ ಭಾವಿಹಳ್ಳಿ, ತಿಮ್ಮಪ್ಪಗುಡಿಯಲ್ಲಿ 550 ಎಕರೆ ಜಾಗವನ್ನು ಗಣಿಗಾರಿಕೆಗೆ ಅಕ್ರಮವಾಗಿ ಗುತ್ತಿಗೆಗೆ ನೀಡಿದ ಆರೋಪವಿದೆ. ಗುತ್ತಿಗೆ ನೀಡುವಾಗ ಮಿನರಲ್ಸ್‌ ಕನ್ಸಿಷನ್‌ ನಿಯಮಗಳ, ನಿಯಮ 59 (2)ನ್ನು ಉಲ್ಲಂಘಿಸಿ ಕುಮಾರಸ್ವಾಮಿಯವರು ಮಂಜೂರು ಮಾಡಿದ್ದರು ಎನ್ನಲಾಗಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರು ಎಂಸಿಆರ್‌ ನಿಯಮಾವಳಿಗಳನ್ನು ಉಲ್ಲಂಘಿಸಿ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಜೊತೆಗೂಡಿ, ಸುಳ್ಳು ದಾಖಲೆ ಸೃಷ್ಟಿಸಿದ ವಿನೋದ್‌ ಗೋಯಲ್‌ಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಎನ್‌ಇಬಿ ರೇಂಜ್‌ನಲ್ಲಿನ 550 ಎಕರೆ ಭೂಮಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣದಲ್ಲಿ ಎಸ್‌ ಐ ಟಿ ಅಧಿಕಾರಿಗಳು ವಿನೋದ್‌ ಗೋಯಲ್‌ ಅವರನ್ನು ಪ್ರಥಮ ಆರೋಪಿಯನ್ನಾಗಿ ಮಾಡಿದ್ದಾರೆ. ಎಚ್‌ ಡಿ ಕುಮಾರಸ್ವಾಮಿ ಅವರನ್ನು ಎರಡನೇ ಆರೋಪಿಯಾಗಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಕೆ ಜಯಚಂದ್ರ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಬಿ.ಟಿ.ಜವರೇಗೌಡ ಮೂರು ಮತ್ತು ನಾಲ್ಕನೇ ಆರೋಪಿಗಳನ್ನಾಗಿ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಸರ್ಕಾರವು 2014ರ ಜನವರಿ 24ರಂದು ವಿಶೇಷ ತನಿಖಾ ದಳವನ್ನು (ಎಸ್‌ ಐ ಟಿ) ರಚಿಸಿತ್ತು. ಅದರಂತೆ ಎಲ್ಲಾ ಗಣಿಗಾರಿಕೆ ಪ್ರಕರಣಗಳನ್ನು ಎಸ್‌ ಐ ಟಿ ಗೆ ವರ್ಗಾಯಿಸಿತ್ತು. ಈ ಪ್ರಕರಣವನ್ನೂ ಎಸ್‌ ಐ ಟಿ ತನಿಖೆ ನಡೆಸಿ, ಆರೋಪ ಪಟ್ಟಿ ಸಿದ್ಧಪಡಿಸಿದ್ದು, ರಾಜ್ಯಪಾಲರ ಅನುಮತಿಗೆ ಕಾಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News