ನಾನು ಭಯ ಪಡೋಕೆ ಸಿಎಂ ಏನಾದರೂ ದೆವ್ವವೇ? : ಎಚ್‌.ಡಿ.ಕುಮಾರಸ್ವಾಮಿ

Update: 2024-10-05 13:09 GMT

ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಕುಮಾರಸ್ವಾಮಿಗೆ ನನ್ನ ಕಂಡರೆ ಭಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಶನಿವಾರ ಜೆ.ಪಿ.ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರನ್ನು ಕಂಡರೆ ಯಾರಿಗೆ ಭಯ? ನಾನು ಭಯ ಪಡೋಕೆ ಸಿಎಂ ಏನಾದರೂ ದೆವ್ವವೇ? ಅವರೇನು ದೆವ್ವ ಅಲ್ಲವಲ್ಲಾ, ಅವರಂದ್ರೆ ನಾನು ಯಾಕೆ ಭಯಪಡಲಿ. ಇಷ್ಟಕ್ಕೂ ನಾನು ದೆವ್ವಕ್ಕೂ ಹೆದರಲ್ಲ, ಇದು ಸಿದ್ದರಾಮಯ್ಯಗೆ ಗೊತ್ತಿರಲಿ ಎಂದರು.

ಕುಮಾರಸ್ವಾಮಿಯನ್ನು ಹೆದರಿಸೋಕೆ ಯಾರಿಂದಲೂ ಆಗಲ್ಲ. ನಾನು ಯಾರಿಗೂ ಹೆದರಲ್ಲ. ಹೆದರೋದು ದೇವರಿಗೆ ಮತ್ತು ನಾಡಿನ ಜನರಿಗಷ್ಟೇ. ಸಿದ್ದರಾಮಯ್ಯನಂಥವರು ಲಕ್ಷ ಜನ ಬರಲಿ, ನಾನು ಹೆದರಲ್ಲ. ಹೆದರೋದು ನನ್ನ ಬೆಳೆಸಿರುವ ನಾಡಿನ ಜನಕ್ಕೆ. ಇಂತಹ ಸಿದ್ದರಾಮಯ್ಯಗೆ ನಾನು ಹೆದರುತ್ತೀನಾ? ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು.

ನಾನು ರಾಜಕೀಯದಲ್ಲಿ ಸಿದ್ದರಾಮಯ್ಯ ನೆರಳಲ್ಲಿ ಬಂದಿದ್ದೀನಾ? ಸ್ವತಃ ದುಡಿಮೆ ಮೇಲೆ, ಕಾರ್ಯಕರ್ತರು, ಜನರ ಆಶೀರ್ವಾದದಿಂದ ಬಂದಿದ್ದೇನೆ. ಸಿದ್ದರಾಮಯ್ಯ ಹೆಸರಲ್ಲಿ ನಾನು ರಾಜಕೀಯ ಮಾಡಿಲ್ಲ. ಹಾಗೆ ನೋಡಿದರೆ ಸಿದ್ದರಾಮಯ್ಯನವರೇ ನನ್ನ ಪಕ್ಷದ ಕಾರ್ಯಕರ್ತರು ಮತ್ತು ದೇವೇಗೌಡರ ನೆರಳಿನಲ್ಲಿ ಬಂದವರು ಎಂದು ಅವರು ಕಿಡಿಗಾರಿದರು.

ಅದು ಯಾವುದೋ ಕೇಸ್ ಹಾಕಿಕೊಂಡು ನನ್ನ ಹೆದರಿಸೋಕೆ ಆಗುತ್ತಾ? ಕುಮಾರಸ್ವಾಮಿಗೆ ಬಂಧನದ ಭೀತಿ ಎಂದು ಹೇಳುತ್ತಿದ್ದಾರೆ. ನನಗೆ ಅಂತಹ ಯಾವುದೇ ಭೀತಿ ಇಲ್ಲ' ಎಂದು ಕುಮಾರಸ್ವಾಮಿ ಹೇಳಿದರು.

ಕಾಲವೇ ಉತ್ತರ ಕೊಡುತ್ತೆ: ನಿಮ್ಮ ಮೇಲೆ ಎಫ್‍ಐಆರ್ ಮಾಡಿ ಬೆದರಿಸುವ ತಂತ್ರನಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬೆದರಿಕೆ ಅಲ್ಲದೆ ಇನ್ನೇನು? ಏನಿದೆ ಎಫ್‍ಐಆರ್ ನಲ್ಲಿ?. ಅದರ ಬಗ್ಗೆ ನಾನು ಚರ್ಚೆ ಮಾಡೋದು ಅನಾವಶ್ಯಕ. ಕಾಲವೇ ಪ್ರತಿಯೊಂದಕ್ಕೂ ಉತ್ತರ ನೀಡುತ್ತದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News