ಎಪ್ರಿಲ್‍ನೊಳಗೆ ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆ : ಎಚ್.ಡಿ.ಕುಮಾರಸ್ವಾಮಿ

Update: 2025-01-12 15:07 GMT

ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರವಿವಾರ ನಗರದ ಜೆ.ಪಿ.ಭವನದಲ್ಲಿ ಪಕ್ಷದ ಮುಖಂಡರ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ. ಪಕ್ಷದ ದ್ವೈವಾರ್ಷಿಕ ಸಾಂಸ್ಥಿಕ ಚುನಾವಣೆ, ಸದಸ್ಯತ್ವ ಅಭಿಯಾನ ಚುರುಕುಗೊಳಿಸುವುದು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ತಯಾರಿ ಹಾಗೂ ಪಕ್ಷ ಸಂಘಟನೆ ವಿಷಯಗಳ ಬಗ್ಗೆ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಮುಂದಿನ ಏಪ್ರಿಲ್ ಒಳಗೆ ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ಚುನಾವಣೆ ಮೂಲಕ ಆಯ್ಕೆ ಮಾಡುವ ತೀರ್ಮಾನ ಆಗಿದೆ. ಪಕ್ಷದ ಸಂಘಟನೆ ಬಗ್ಗೆ ಪಕ್ಷದ ನಾಯಕರಿಗೆ ಕಠಿಣವಾಗಿಯೇ ಹೇಳಿದ್ದೇನೆ. ಯಾರು ಪ್ರಾಮಾಣಿಕವಾಗಿ ಪಕ್ಷದ ಸಂಘಟನೆಗೆ ದುಡಿಯುತ್ತಾರೋ ಅಂಥವರಿಗೆ ಆದ್ಯತೆ ಕೊಡುತ್ತೇವೆ. ನಾನು ಕೂಡ ಪಕ್ಷ ಸಂಘಟನೆಯಲ್ಲಿ ನಿಯಮಿತವಾಗಿ ತೊಡಗಿಸಿಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಾರದಲ್ಲಿ ನಾಲ್ಕು ದಿನ ಹೊಸದಿಲ್ಲಿ ಸಚಿವಾಲಯದಲ್ಲಿ ಕೆಲಸ ಮಾಡುತ್ತೇನೆ. ಒಂದು ಅಥವಾ ಎರಡು ದಿನ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಕಾರ್ಖಾನೆಗಳಿಗೆ ಭೇಟಿ ಕೊಡುತ್ತೇನೆ. ಉಳಿದ ಸಮಯವನ್ನು ಪಕ್ಷದ ಕೆಲಸಕ್ಕೆ ಮೀಸಲಿಡುತ್ತೇನೆ. ಪಕ್ಷದ ಸಂಘಟನೆ, ಸಭೆ, ಪ್ರವಾಸ, ಮಂಡ್ಯ ಕ್ಷೇತ್ರಕ್ಕೆ ಭೇಟಿ ಇತ್ಯಾದಿಗಳ ಬಗ್ಗೆ ವೇಳಾಪಟ್ಟಿ ಸಿದ್ಧ ಮಾಡಿಕೊಂಡಿದ್ದೇನೆ. ಇನ್ನು ಮುಂದೆ ಅದರಂತೆಯೇ ಕೆಲಸ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಕಿಡಿ:

ಸಂಕ್ರಾಂತಿ ನಂತರ ಜೆಡಿಎಸ್ ಇರುವುದೇ ಇಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಸಚಿವರೇ... ಮೊದಲು ನಿಮ್ಮ ಪಕ್ಷದ ಕಥೆ ನೋಡಿಕೊಳ್ಳಿ. ಹೊಸದಿಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸನ್ನು ದೂರ ಇಟ್ಟು ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದೆ. ಇಂಡಿ ಕೂಟವನ್ನು ವಿಸರ್ಜನೆ ಮಾಡಿ ಎಂದು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಹೇಳುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ನಾವು ಏಕಾಂಗಿಯಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸುತ್ತೇವೆ ಎಂದು ಶಿವಸೇನೆ ಹೇಳುತ್ತಿದೆ. ಅಲ್ಲೆಲ್ಲಾ ಎಲ್ಲಿದೆ ಕಾಂಗ್ರೆಸ್? ನಿಮ್ಮ ಪಕ್ಷದ ಒಳಗೆ ಏನಾಗುತ್ತಿದೆ ಎನ್ನುವುದನ್ನು ಮೊದಲು ನೋಡಿಕೊಳ್ಳಿ. ನಿಮ್ಮ ಪಕ್ಷದ ತಟ್ಟೆಯಲ್ಲಿಯೇ ಹೆಗ್ಗಣ ಸತ್ತು ಬಿದ್ದಿದೆ ಎಂದು ಕುಮಾರಸ್ವಾಮಿ ತಿರುಗೇಟು ಕೊಟ್ಟರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News