ಬೃಹತ್ ಕೈಗಾರಿಕೆ, ಉಕ್ಕು ಖಾತೆ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಎಚ್.ಡಿ. ಕುಮಾರಸ್ವಾಮಿ
ಹೊಸದಿಲ್ಲಿ: ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಮಾಜಿ ಸಿಎಂ, ಜೆಡಿಎಸ್ ಸಂಸದ ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ, "ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ವಿಶ್ವಾಸವಿರಿಸಿ ಹಂಚಿಕೆ ಮಾಡಿರುವ ಬೃಹತ್ ಕೈಗಾರಿಕೆ ಖಾತೆಯ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಾಯಿತು. ಭಾರತವು ಜಗತ್ತಿನ 3ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಸಂಕಲ್ಪ ತೊಟ್ಟಿರುವ ಪ್ರಧಾನಿಗಳ ಕನಸು ನನಸು ಮಾಡುವುದು, ಕೈಗಾರಿಕಾ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಿ ದೇಶಾದ್ಯಂತ ವಿಸ್ತೃತವಾಗಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಶ್ರಮಿಸಲಾಗುವುದು. ಈ ಸಂದರ್ಭದಲ್ಲಿ ಸಚಿವಾಲಯದ ಅಧಿಕಾರಿಗಳ ಜತೆ ಸಭೆ ನಡೆಸಲಾಯಿತು." ಎಂದು ಬರೆದಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಜೊತೆಗೆ ಮೈತ್ರಿಯಾಗಿರುವ ಜೆಡಿಎಸ್ ಪಕ್ಷವೂ ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ನೀಡಲಾಗಿದೆ.