ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ
ಬೆಂಗಳೂರು: ರಾಜ್ಯದಲ್ಲಿ ಎಲ್ಲ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆ, ವ್ಯಾಪಾರವನ್ನು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆದೇಶ ಹೊರಡಿಸಿದೆ.
ಹುಕ್ಕಾ ತಂಬಾಕು ಅಥವಾ ನಿಕೋಟಿನ್ ಒಳಗೊಂಡ, ನಿಕೋಟಿನ್ ರಹಿತ, ತಂಬಾಕು ರಹಿತ, ಸ್ವಾಧಭರಿತ, ಸ್ವಾಧರಹಿತ ಹುಕ್ಕಾ, ಮೊಲಾಸಸ್, ಶಿಶಾ ಹಾಗೂ ಇದೇ ಮಾದರಿಯ ಇನ್ನಿತರೆ ಹೆಸರುಗಳಿಂದ ಕರೆಯಲ್ಪಡುವ ಹುಕ್ಕಾ ಉತ್ಪನ್ನಗಳನ್ನು ನಿಷೇಧಿಸಲಾಗಿದೆ.
ಇದನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಸಿಒಟಿಪಿಎ ಕಾಯ್ದೆ-2003, ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯಿದೆ 2015, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006, ಕರ್ನಾಟಕ ವಿಷ(ಸ್ವಾಧೀನ ಮತ್ತು ಮಾರಾಟ) ನಿಯಮ 2015 ಮತ್ತು ಭಾರತೀಯ ದಂಡ ಸಂಹಿತ ಮತ್ತು ಅಗ್ನಿ ನಿಯಂತ್ರಣ ಹಾಗೂ ಅಗ್ನಿ ಸುರಕ್ಷತೆ ಕಾಯ್ದೆ ಪ್ರಕಾರ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಹೊಟೇಲ್, ಬಾರ್, ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಸೇವನೆ ಮಾಡುವುದರಿಂದ ಆಹಾರ ಪದಾರ್ಥಗಳು ಸಾರ್ವಜನಿಕರ ಸೇವನೆಗೆ ಅಸುರಕ್ಷಿತವಾಗಿರುತ್ತದೆ ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು. ಸಂವಿಧಾನದ 47ನೆ ಪರಿಚ್ಛೇದದಲ್ಲಿ ಉಲ್ಲೇಖಿಸಿರುವಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವುದು ರಾಜ್ಯ ಸರಕಾರದ ಕರ್ತವ್ಯವಾಗಿದೆ. ಆದುದರಿಂದ, ಹುಕ್ಕಾ ಉತ್ಪನ್ನಗಳ ಸೇವನೆಯನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.