ಕೇರಳದಲ್ಲಿ ಕೊರೋನ ಪ್ರಕರಣ ಹೆಚ್ಚಳ: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಬೆಂಗಳೂರು: ಕೇರಳದಲ್ಲಿ ಕೊರೋನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ನಮ್ಮ ರಾಜ್ಯದಲ್ಲಿಯೂ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಶನಿವಾರ ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್, ಮಾಸ್ಕ್, ಬೆಡ್‍ಗಳ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಕಳೆದ ಬಾರಿ ಆದಂತೆ ಯಾವುದೆ ಲೋಪಗಳು ಆಗದಂತೆ ಸೂಚನೆ ನೀಡಲಾಗಿದೆ ಎಂದರು.
ಡಾ.ರವಿ ನೇತೃತ್ವದ ತಾಂತ್ರಿಕ ಸಲಹಾ ಸಮಿತಿಯ ಸಭೆ ಮಂಗಳವಾರ ನಡೆಯಲಿದ್ದು, ಸಮಿತಿಯಲ್ಲಿರುವ ಎಲ್ಲ ತಜ್ಞರು ಚರ್ಚೆ ಮಾಡಿ ಸರಕಾರಕ್ಕೆ ಸಲಹೆಗಳನ್ನು ನೀಡಲಿದ್ದಾರೆ. ಸಾರ್ವಜನಿಕರು ಯಾವುದೆ ರೀತಿಯಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಎಚ್ಚರಿಕೆ ವಹಿಸುವುದು ಉತ್ತಮ. ಕೋವಿಡ್ ಲಕ್ಷಣಗಳು ಕಂಡು ಬಂದರೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಕೇರಳದಿಂದ ನಮ್ಮ ರಾಜ್ಯಕ್ಕೆ ಬರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡುವುದು ಈ ಹಂತದಲ್ಲಿ ಅಗತ್ಯವಿಲ್ಲ. ತಾಂತ್ರಿಕ ಸಲಹಾ ಸಮಿತಿ ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೆ ಸರಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆಗಳನ್ನು ಮಾಡುತ್ತಿದ್ದೇವೆ. ಸದ್ಯ ನಮ್ಮ ಬಳಿ 30 ಸಾವಿರ ಆರ್‍ಟಿಪಿಸಿಆರ್ ಕಿಟ್‍ಗಳಿವೆ. ಈಗಾಗಲೆ ಟೆಂಡರ್ ಕರೆದಿದ್ದು, ಇನ್ನೊಂದು ವಾರದಲ್ಲಿ ನಮಗೆ ಪೂರೈಕೆ ಆಗುತ್ತವೆ ಎಂದು ಅವರು ತಿಳಿಸಿದರು.
ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದ ಆರೋಪಿ ವೈದ್ಯರಿಗೆ ಹೈಕೋರ್ಟ್ ಜಾಮೀನು ನೀಡಿದೆ. ಈ ಸಂಬಂಧ ಸಿಐಡಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ನಮ್ಮ ಜೊತೆ ಚರ್ಚೆ ನಡೆಸಿದ್ದು, ನಮ್ಮ ಕಾನೂನಿನಲ್ಲಿ ಅಗತ್ಯ ತಿದ್ದುಪಡಿಗಳನ್ನು ತರುವಂತೆ ಸಲಹೆ ನೀಡಿದ್ದಾರೆ. ಈ ಸಂಬಂಧ ಅಡ್ವೊಕೇಟ್ ಜನರಲ್ ಜೊತೆಯೂ ಚರ್ಚೆ ನಡೆಸಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಗಳು ನಡೆಯದಂತೆ ತಡೆಯಲು ರಾಜ್ಯ ಮಟ್ಟದ ಟಾಸ್ಕ್‍ಫೋರ್ಸ್ ರಚನೆ ಮಾಡಲು ಚಿಂತನೆ ನಡೆಸಲಾಗಿದೆ. ಜೊತೆಗೆ ಜಿಲ್ಲಾ ಮಟ್ಟದಲ್ಲಿಯೂ ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ಮಾಡಲು ಅನುವಾಗುವಂತೆ ಟಾಸ್ಕ್ ಫೋರ್ಸ್ ಮಾಡಲಾಗುವುದು ಎಂದು ಅವರು ಹೇಳಿದರು.