ಕೊಡಗಿನಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ

Update: 2023-07-05 13:08 GMT

ಮಡಿಕೇರಿ ಜು.5 : ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 393 ಮಿ.ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 956 ಮಿ.ಮೀ ಮಳೆಯಾಗಿತ್ತು.

ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಮಂಜು ಮುಸುಕಿದ ವಾತಾವರಣದೊಂದಿಗೆ ಶೀತ ಗಾಳಿ ಬೀಸುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದೆ. ಭಾಗಮಂಡಲದ ಮೇಲುಸೇತುವೆ ಕಾಮಗಾರಿ ಅಪೂರ್ಣಗೊಂಡ ಕಾರಣ ರಸ್ತೆ ಕೆಸರುಮಯವಾಗಿದ್ದು, ವಾಹನಗಳ ಚಾಲನೆ ಮತ್ತು ಪಾದಾಚಾರಿಗಳ ಓಡಾಟಕ್ಕೆ ಅಡಚಣೆ ಉಂಟಾಗಿದೆ.

ನಾಪೋಕ್ಲು ಭಾಗದಲ್ಲೂ ಉತ್ತಮ ಮಳೆಯಾಗುತ್ತಿದ್ದು, ವಿರಾಜಪೇಟೆ, ಪೊನ್ನಂಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನಲ್ಲೂ ಮಳೆಯಾಗುತ್ತಿದೆ. ಗಾಳಿ ಬೀಸದೆ ಇರುವ ಕಾರಣ ದೊಡ್ಡಮಟ್ಟದ ಅನಾಹುತ ಎಲ್ಲೂ ಸಂಭವಿಸಿಲ್ಲ. ಗ್ರಾಮೀಣ ಭಾಗದಲ್ಲಿ ಅಲ್ಲಲ್ಲಿ ಮರ ಮತ್ತು ವಿದ್ಯುತ್ ಕಂಬಗಳು ಬಿದ್ದಿವೆ. ಇದರಿಂದ ಕುಗ್ರಾಮಗಳ ಮನೆಗಳ ವಿದ್ಯುತ್ ಕಡಿತಗೊಂಡು ನಿವಾಸಿಗಳು ಕಾರ್ಗತ್ತಲಲ್ಲಿ ದಿನ ದೂಡುವಂತ್ತಾಗಿದೆ.

ಮಡಿಕೇರಿ ನಗರದಲ್ಲಿ ಮಂಜು ಮುಸುಕಿದ ವಾತಾವರಣ ಮತ್ತು ಮೈಕೊರೆಯುವ ಚಳಿ ಇದ್ದು, ನಿರಂತರವಾಗಿ ಮಳೆಯಾಗುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿಯ ಬೃಹತ್ ತಡೆಗೋಡೆ ಕಳೆದ ವರ್ಷದಂತೆ ಈ ಬಾರಿಯೂ ಆತಂಕವನ್ನು ಸೃಷ್ಟಿಸಿದೆ. ಸಂಬಂಧಿಸಿದ ಎಂಜಿನಿಯರ್ ಗಳು ತಡೆಗೋಡೆಗೆ ಹಾನಿಯಾಗದಂತೆ ಟಾರ್ಪ್‍ಗಳ ರಕ್ಷಣೆಯನ್ನು ನೀಡಿದ್ದಾರೆ. ಸತತ ಮಳೆಯಾಗುತ್ತಿರುವುದರಿಂದ ಮಡಿಕೇರಿ- ಸಂಪಾಜೆ ಹೆದ್ದಾರಿಯಲ್ಲಿ ರಸ್ತೆಯ ಕೆಲವು ಭಾಗಗಳಲ್ಲಿ ಸಣ್ಣ ಬಿರುಕುಗಳು ಕಾಣಿಸಿಕೊಂಡಿದ್ದು, ಮುಂಜಾಗೃತಾ ಕ್ರಮವಾಗಿ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಹಾಮಳೆಯಿಂದ ಎದುರಾಗುವ ಅನಾಹುತಗಳನ್ನು ಎದುರಿಸಲು ಎನ್‍ಡಿಆರ್‍ಎಫ್, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಚೆಸ್ಕಾಂ, ಕಂದಾಯ ಇಲಾಖೆ ಸೇರಿದಂತೆ ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದೆ. ಬೆಟ್ಟಗುಡ್ಡ ಮತ್ತು ನದಿತೀರದ ನಿವಾಸಿಗಳ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ. ಗ್ರಾ.ಪಂ ಗಳು ಕೂಡ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿವೆ.

ಮಳೆ ತಡವಾಗಿ ಆರಂಭಗೊಂಡಿರುವುದರಿಂದ ಜಿಲ್ಲೆಯಲ್ಲಿ ಸುಮಾರು 500 ಮಿ.ಮೀ ನಷ್ಟು ಮಳೆಯ ಕೊರತೆ ಉಂಟಾಗಿದೆ. ಕೊಡಗಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದರೂ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿಲ್ಲ. ಮಾನ್ಸೂನ್ ಪ್ರವಾಸೋದ್ಯಮದ ಹೆಸರಿನಲ್ಲಿ ಮತ್ತು ಚಳಿ, ಮಳೆಯ ಅನುಭವಕ್ಕಾಗಿ ರಾಜ್ಯ ಹಾಗೂ ಹೊರ ರಾಜ್ಯದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಹಾರಂಗಿ ಜಲಾಶಯದ ನೀರಿನ ಮಟ್ಟ : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2823.99 ಅಡಿಗಳು. ಕಳೆದ ವರ್ಷ ಇದೇ ದಿನ 2854.37 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 10.20 ಮಿ.ಮೀ., ಕಳೆದ ವರ್ಷ ಇದೇ ದಿನ 8.20 ಮಿ.ಮೀ. ಇಂದಿನ ನೀರಿನ ಒಳಹರಿವು 1518 ಕ್ಯುಸೆಕ್, ಕಳೆದ ವರ್ಷ ಇದೇ ದಿನ 9497 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 12866 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News