ಹುಬ್ಬಳ್ಳಿ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಎನ್‌ಕೌಂಟರ್‌ಗೆ ಬಲಿಯಾದ ಆರೋಪಿಯ ಮೃತದೇಹ ಸಮಾಧಿ ಮಾಡಲು ಹೈಕೋರ್ಟ್ ಅನುಮತಿ

Photo credit: PTI
ಬೆಂಗಳೂರು: ಹುಬ್ಬಳ್ಳಿಯ ಐದು ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿ, ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾಗಿರುವ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಮೃತದೇಹವನ್ನು ಸಮಾಧಿ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ.
ಮೃತದೇಹ ದಹನ ಮಾಡದಂತೆ ಹಾಗೂ ಮೃತದೇಹವನ್ನು ಸಂರಕ್ಷಿಸಿಸುವಂತೆ ನಿರ್ದೇಶನ ಕೋರಿ ಪಿಯುಸಿಎಲ್ ಸಂಘಟನೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಖ್ಯ ನ್ಯಾಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಾ. ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಪ್ರಕರಣದ ಬಗ್ಗೆ ಶುಕ್ರವಾರ ಸಮಗ್ರ ಆದೇಶ ಹೊರಡಿಸಲಾಗುವುದು ಎಂದು ಹೇಳಿದೆ.
ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ, ಮೃತದೇಹದ ಸಮಾಧಿ ಮಾಡಲು ಅನುಮತಿ ಕೊಡಬೇಕು ಎಂದು ಮನವಿ ಮಾಡಿದರು. ಹಾಗಾಗಿ ಮೃತದೇಹವನ್ನು ಸಮಾಧಿ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ. ಜೊತೆಗೆ ಘಟನೆ ನಂತರ ಪೋಕ್ಸೋ ಕಾಯ್ದೆಯಡಿ ಹಾಗೂ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ದಾಖಲಾಗಿರುವ ಎರಡೂ ಎಫ್‌ಐಆರ್‌ಗಳ ಇಂಗ್ಲಿಷ್ ಅನುವಾದದ ಪ್ರತಿಯನ್ನು ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.