ಶಾಸಕರಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿ ಚುನಾವಣೆ ಗೆದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧು ಕೋರಿ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಮಂಗಳವಾರ ಆದೇಶ ನೀಡಿದೆ.
ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ.ಶಂಕರ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಈ ಚುನಾವಣಾ ತಕರಾರು ಅರ್ಜಿಯನ್ನು ವಜಾ ಮಾಡುವಂತೆ ಸಿದ್ದರಾಮಯ್ಯ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಈ ವಾದವನ್ನು ಆಲಿಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ತಕರಾರು ಅರ್ಜಿಯನ್ನು ವಜಾಗೊಳಿಸಿದೆ.
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಇದು ಲಂಚಕ್ಕೆ ಸಮವಾಗಿದೆ. ಹೀಗಾಗಿ ಅಕ್ರಮ ಎಸಗುವ ಮೂಲಕ ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧು ಗೊಳಿಸಬೇಕು ಎಂದು ಶಂಕರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.