ʼಮೆಟ್ರೋ ಪ್ರಯಾಣ ದರ ಏರಿಕೆʼ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರವನ್ನು ಹೆಚ್ಚಳ ಮಾಡಿದ್ದ ಬಿಎಂಆರ್‌ಸಿಎಲ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿದೆ.
ಬಿಎಂಆರ್‌ಸಿಎಲ್ ನಿಯಮಬಾಹಿರವಾಗಿ ಶೇ.71ರವರೆಗೂ ದರ ಏರಿಕೆ ಮಾಡಿರುವುದನ್ನು ಪ್ರಶ್ನಿಸಿ ಬೆಂಗಳೂರಿನ ಸನತ್ ಕುಮಾರ್ ಶೆಟ್ಟಿ, ಚೈತನ್ಯ ಸುಬ್ರಹ್ಮಣ್ಯ ಮತ್ತು ಚೇತನ್ ಗಾಣಿಗೇರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ, ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆ 2002ರ ಸೆಕ್ಷನ್ 33ರ ಅಡಿಯಲ್ಲಿ ಶುಲ್ಕ ನಿಗದಿಗೆ ಅವಕಾಶವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿದೆ.
ಅಲ್ಲದೆ, ಮೆಟ್ರೋ ಆಡಳಿತವು ಕಾಲಕಾಲಕ್ಕೆ ದರವನ್ನು ನಿಗದಿಪಡಿಸಲು ಅಧಿಕಾರವಿದೆ. ದರ ನಿಗದಿ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿ ಶಿಫಾರಸ್ಸಿನಂತೆ ಬೆಲೆ ಏರಿಕೆ ಮಾಡಲಾಗಿದೆ. ಬೆಲೆ ಏರಿಕೆ ಸಂಬಂಧ ರಚನೆಯಾಗಿದ್ದ ತಜ್ಞರ ಸಮಿತಿ ಎಲ್ಲ ಆಯಾಮಗಳಲ್ಲಿ ಅಧ್ಯಯನ ಮಾಡಿ ಬೆಲೆ ಏರಿಕೆಗೆ ಶಿಫಾರಸ್ಸು ಮಾಡಿದೆ. ಇಂಥ ತಜ್ಞರು ಪರಿಶೀಲಿಸಿ ಆದೇಶಿಸಿರುವ ಅಂಶಗಳನ್ನು ನ್ಯಾಯಾಲಯ ಮರು ಪರಿಶೀಲನೆ ನಡೆಸಲು ಅವಕಾಶ ಇಲ್ಲ ಎಂದು ನ್ಯಾಯಪೀಠ ತಿಳಿಸಿದೆ.