ರಾಜ್ಯದಲ್ಲಿ ಸರಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ: ಹೈಕೋರ್ಟ್ ಅಸಮಾಧಾನ

High Court expresses displeasure over lack of infrastructure in state government schools

Update: 2023-10-09 15:11 GMT

ಬೆಂಗಳೂರು: ರಾಜ್ಯದಲ್ಲಿ ಸರಕಾರಿ ಶಾಲೆಗಳಲ್ಲಿನ ಮೂಲಸೌಕರ್ಯಗಳ ಕೊರತೆಯನ್ನು ನೀಗಿಸುವಲ್ಲಿ ವಿಫಲವಾಗಿರುವ ಸರಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಪೋಷಕರಿಗೆ ಊಟಕ್ಕಿಲ್ಲದಿದ್ದರೂ ಬೇರೆ ದಾರಿಯಿಲ್ಲದೆ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಕುರಿತಂತೆ 2013ರಲ್ಲಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ, ಸರಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೆ, ಮುಂದಿನ ಎಂಟು ವಾರಗಳಲ್ಲಿ ಎಲ್ಲ ಸರಕಾರಿ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಿರುವ ಸಂಬಂಧ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಸರಕಾರ ಉಚಿತ ಬಸ್ ಪ್ರಯಾಣ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಕಲ್ಪಿಸಿದರೂ, ನಮಗೆ(ನ್ಯಾಯಪೀಠಕ್ಕೆ) ಅಭ್ಯಂತರವಿಲ್ಲ. ಆದರೆ, ಬಡ ಮಕ್ಕಳ ಶಿಕ್ಷಣಕ್ಕೆ ಅಗತ್ಯ ಮೂಲ ಸೌಕರ್ಯಗಳುಳ್ಳ ವ್ಯವಸ್ಥೆ ಕಲ್ಪಿಸಬೇಕು ಎಂಬುದೇ ನಮ್ಮ ಆಶಯ ಎಂದು ಪೀಠ ಪ್ರತಿಪಾದಿಸಿತು. ಸರಕಾರಗಳು ಸರಕಾರಿ ಶಾಲೆಗಳಲ್ಲಿ ಈ ಸೌಲಭ್ಯಗಳನ್ನು ಕಲ್ಪಿಸುವುದಕ್ಕೆ ಮುಂದಾಗಿಲ್ಲ. ಇದು ಪರೋಕ್ಷವಾಗಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ತಳ್ಳುವಂತೆ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಅಂಬೇಡ್ಕರ್ ಅವರು ಯಾವುದೇ ಭಾವಚಿತ್ರವನ್ನು ನೋಡಿದರೂ ಪುಸ್ತಕವನ್ನು ಹಿಡಿದುಕೊಂಡಿರುತ್ತಾರೆ. ಅದರ ಉದ್ದೇಶವೇ ಶಿಕ್ಷಣದ ಮಹತ್ವವನ್ನು ತಿಳಿಸುವುದಾಗಿದೆ. ಮುಂದುವರೆದ ಕೆಲ ದೇಶಗಳಲ್ಲಿ ರಕ್ಷಣಾ ಇಲಾಖೆಗಿಂತಲೂ ಹೆಚ್ಚಿನ ಪ್ರಮಾಣದ ಅನುದಾನವನ್ನು ಶಿಕ್ಷಣಕ್ಕೆ ಮೀಸಲಿಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಸರಕಾರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News