ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ‘ರಾಜ್ಯೋತ್ಸವ ಆಚರಣೆ’ಗೆ ಹೈಕೋರ್ಟ್ ಅನುಮತಿ

Update: 2023-10-31 13:51 GMT

ಬೆಂಗಳೂರು, ಅ.31: ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನ.1ರಿಂದ 3 ದಿನಗಳ ಕನ್ನಡ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಅಲ್ಲದೆ, ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂಥ ಕಾರ್ಯಕ್ರಮ ನಡೆಸಬಾರದು ಎಂದು ಸೂಚನೆ ನೀಡಿದೆ.

ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ಅವಕಾಶ ನಿರಾಕರಿಸಿ ಜಿಲ್ಲಾಧಿಕಾರಿ ನೀಡಿದ್ದ ಹಿಂಬರಹ ಪ್ರಶ್ನಿಸಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ ನಡೆಸಿತು.

ಈದ್ಗಾ ಮೈದಾನ ಬಳಕೆ ಮಾಡಲು ಒಂದು ವೇಳೆ ಕಾನೂನು ಅಡಚಣೆಗಳು ಉಂಟಾದಲ್ಲಿ ಅರ್ಜಿದಾರರ ಒಕ್ಕೂಟದಿಂದ ರಾಜ್ಯೋತ್ಸವ ಆಚರಣೆ ಮಾಡಲು ಜಿಲ್ಲಾಡಳಿತದಿಂದ ಪರ್ಯಾಯ ಮೈದಾನ ಒದಗಿಸಬೇಕು ಎಂದು ಆದೇಶದಲ್ಲಿ ನ್ಯಾಯಪೀಠ ಸ್ಪಷ್ಟ ನಿರ್ದೇಶನ ನೀಡಿದೆ.

ಕನ್ನಡ ನಾಡು, ನುಡಿಗೆ ಸಂಬಂಧಿಸಿದಂತೆ ಕೇವಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಳ್ಳಲಾಗುವುದು. ರಾಜ್ಯ ಬಾವುಟವನ್ನು ಮಾತ್ರ ಧ್ವಜಾರೋಹಣ ಮಾಡಿ, ಇತರೆ ಯಾವುದೇ ಬಾವುಟ ಅಳವಡಿಸುವುದಿಲ್ಲ ಎಂದು ಅರ್ಜಿದಾರರ ಪರ ವಕೀಲರು ನೀಡಿದ ಮುಚ್ಚಳಿಕೆ ದಾಖಲಿಸಿಕೊಂಡಿತು. ಬಳಿಕ ಷರತ್ತುಬದ್ದ ಅನುಮತಿ ನೀಡಿ, ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಮಾತ್ರ ಅವಕಾಶ ಮಾಡಿಕೊಟ್ಟಿದೆ.

ಒಕ್ಕೂಟದ ಸದಸ್ಯರು ಯಾವುದೇ ಧರ್ಮದ ಧಾರ್ಮಿಕ ಭಾವನೆಗಳ ವಿರುದ್ಧ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ಹೇಳಿಕೆ ನೀಡದಂತೆ ನೋಡಿಕೊಳ್ಳಬೇಕು ಎಂದು ಒಕ್ಕೂಟದ ಮುಖ್ಯಸ್ಥರಿಗೆ ನಿರ್ದೇಶನ ನೀಡಿದೆ.

ಕನ್ನಡ ರಾಜ್ಯೋತ್ಸವನ್ನು ಎಲ್ಲ ಧರ್ಮದವರು ಸೇರಿ ಆಚರಣೆ ಮಾಡಬೇಕಾದ ಕಾರ್ಯಕ್ರಮ. ಹಬ್ಬದ ರೀತಿ ಸಂಭ್ರಮ ಮಾಡಬೇಕಿದೆ. ಅಂತಹ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವುದಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿತು. ಈ ರೀತಿಯ ಕಾರ್ಯಕ್ರಮಗಳಿಗೆ ರಾಜ್ಯ ಸರಕಾರ ಯಾವುದೇ ಆಕ್ಷೇಪ ಮಾಡಬಾರದು. ರಾಜ್ಯ ಸರಕಾರವೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡುತ್ತಿರುವಾಗ, ಇಲ್ಲಿ ಮಾತ್ರ ಅಡ್ಡಿಪಡಿಸುತ್ತಿರುವುದು ಏಕೆ ಎಂದು ಕೇಳಿತು.

ಪ್ರಕರಣವೇನು?: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನ.1ರಿಂದ 3ರವರೆಗೆ ಕನ್ನಡ ರಾಜ್ಯೋತ್ಸವ ಹಾಗೂ ನಗರ ದೇವತೆ ಅಣ್ಣಮ್ಮ ದೇವಿ ಉತ್ಸವ ಮತ್ತು ಕನ್ನಡ ಸಂಸ್ಕøತಿಯನ್ನು ಪ್ರಸ್ತುತಪಡಿಸುವ ಸಾಂಸ್ಕøತಿ ಕಾರ್ಯಕ್ರಮ ಪ್ರದರ್ಶನ ಮಾಡಲು ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರಿಕ ಒಕ್ಕೂಟ ಅ.17ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತ್ತು.

ಈ ಮನವಿಯನ್ನು ಪರಿಶೀಲಿಸಿದ್ದ ಜಿಲ್ಲಾಧಿಕಾರಿಗಳು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶವಿದೆ. ಈ ಹಿನ್ನೆಲೆಯಲ್ಲಿ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಿದಲ್ಲಿ ಅದು ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಯಾದಂತಾಗಲಿದೆ. ಆದ ಕಾರಣ ಅನುಮತಿ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಹಿಂಬರಹ ನೀಡಿದ್ದರು. ಇದನ್ನು ಪ್ರಶ್ನಿಸಿ ಒಕ್ಕೂಟ ಹೈಕೋರ್ಟ್ ಮೆಟ್ಟಿಲೇರಿತ್ತು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News