ವಾಲ್ಮೀಕಿ ನಿಗಮ ಹಗರಣ: ಸಿಬಿಐಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಸುವಂತೆ ಸಲ್ಲಿಸುವಂತೆ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಕುರಿತು ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಬಿಜೆಪಿ ನಾಯಕರಾದ ಬಸವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ವೆಂಕಟೇಶ್ ದಳವಾಯಿ, ಪ್ರಕರಣ ಸಂಬಂಧ ಈಗಾಗಲೇ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ರಾಜಕಾರಣಿಗಳು ಮತ್ತು ಹಿರಿಯ ಅಧಿಕಾರಿಗಳ ವಿರುದ್ಧ ಸರಿಯಾದ ರೀತಿಯಲ್ಲಿ ತನಿಖೆ ನಡೆಸಬೇಕಾದರೆ ಹೈಕೊರ್ಟ್ ಮೇಲ್ವಿಚಾರಣೆಯಲ್ಲಿ ನಡೆಯಬೇಕಾಗುತ್ತದೆ.
ದೀನದಲಿತರಿಗೆ ಸೇರಬೇಕಾದ ಹಣವನ್ನು ಲೂಟಿ ಮಾಡಲಾಗಿದೆ. ಇದಕ್ಕೆ ಪ್ರಮುಖ ಕಾರಣರಾದವರನ್ನೂ ಈವರೆಗೂ ವಿಚಾರಣೆಗೆ ಒಳಪಡಿಸಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡದೆ ಮೇಲ್ವಿಚಾರಣೆ ಮಾಡವುದಕ್ಕೆ ಹೈಕೋರ್ಟ್‌ಗೆ ಅಧಿಕಾರವಿದೆ ಎಂದು ಪೀಠಕ್ಕೆ ತಿಳಿಸಿದರು.
ಜತೆಗೆ, 2024ರ ಜೂನ್ 2 ರಂದು ಸಿಬಿಐ ದಾಖಲಿಸಿರು ಪ್ರಕರಣ ಸಂಬಂಧ ಆದಷ್ಟು ಶೀಘ್ರದಲ್ಲಿ ತನಿಖಾ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡುವಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕು. ಅಲ್ಲದೆ, ತನಿಖಾ ವರದಿಯನ್ನು 15 ದಿನಗಳಿಗೆ ಒಮ್ಮೆ ಹೈಕೋರ್ಟ್‌ಗೆ ಸಲ್ಲಿಸಲು ನಿರ್ದೇಶನ ನೀಡಬೇಕು ಎಂದು ಕೋರಿದರು. ವಾದ ಆಲಿಸಿದ ಪೀಠ, ಸಿಬಿಐಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.