6 ತಿಂಗಳಲ್ಲಿ ಎಲ್ಲ ಬ್ಯಾಕ್‍ಲಾಗ್ ಹುದ್ದೆ ಭರ್ತಿಗೆ ಹೈಕೋರ್ಟ್ ಆದೇಶ

Update: 2023-09-29 18:09 GMT

ಬೆಂಗಳೂರು, ಸೆ. 29: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರಕಾರಿ ಸೇವೆಯಲ್ಲಿ ಆ ಸಮುದಾಯಗಳಿಗೆ ಕಲ್ಪಿಸಿದ ಪ್ರಾತಿನಿಧ್ಯ ಕಸಿದುಕೊಂಡಂತೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಮುಂದಿನ ಆರು ತಿಂಗಳಲ್ಲಿ ಎಲ್ಲ ಇಲಾಖೆಗಳಲ್ಲಿ ಖಾಲಿಯಿರುವ ಬ್ಯಾಕ್‍ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆದೇಶ ನೀಡಿದೆ.

ಬೆಂಗಳೂರಿನ ಪಟ್ಟಂದೂರು ಅಗ್ರಹಾರದ ನಿವಾಸಿ ಎಂ.ಮಂಜುನಾಥ್ ಪ್ರಸಾದ್ ಎಂಬುವರು ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ತೀರ್ಪು ನೀಡಿದೆ.

ದಲಿತ ಸಮುದಾಯಗಳಿಗೆ ಮೀಸಲಾಗಿರುವ ಹುದ್ದೆಗಳನ್ನು ಭರ್ತಿ ಮಾಡದೆ ಉಳಿಸಿಕೊಳ್ಳುವುದು ಸಂವಿಧಾನವು ಈ ಸಮುದಾಯಗಳಿಗೆ ನೀಡಿದ ಸೌಲಭ್ಯಗಳನ್ನು ನಿರಾಕರಿಸಿದಂತೆ. ಜೊತೆಗೆ, ಸರಕಾರಿ ಉದ್ಯೋಗಗಳಲ್ಲಿ ಅವರ ಪ್ರಾತಿನಿಧ್ಯ ಕಸಿದುಕೊಂಡಂತೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣವೇನು?: ಬೆಂಗಳೂರಿನ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೋರಿ ಅರ್ಜಿದಾರರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಸೂಕ್ತ ಮನವಿ ಸಲ್ಲಿಸುವಂತೆ ಸೂಚನೆ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿತ್ತು. ಆದರೆ, ಅರ್ಜಿದಾರರ ಮನವಿಗೆ ಸಂಬಂಧಿಸಿದಂತೆ ಯಾವುದೇ ಪರಿಹಾರ ಕಲ್ಪಿಸಿರಲಿಲ್ಲ. ಇದರಿಂದ, ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News