ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

Update: 2023-12-20 13:44 GMT

ಬೆಂಗಳೂರು: ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಹಾಗೂ ಕೆಎಸ್‍ಡಿಎಲ್ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.

ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17ಎ ಪ್ರಕಾರ ಪ್ರಕ್ರಿಯೆ ಪಾಲಿಸಿಲ್ಲ ಎಂದು ಮಾಡಾಳ್ ಪರ ವಕೀಲರು ವಾದ ಮಂಡಿಸಿದ್ದರು. ವಕೀಲರ ವಾದ ಪುರಸ್ಕರಿಸಿದ ಹೈಕೋರ್ಟ್ ನ್ಯಾಯಪೀಠವು ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಕಳೆದ 2022ರಲ್ಲಿ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಮಾಡಾಳ್ ವಿರೂಪಾಕ್ಷಪ್ಪ ಅವರ ಕಚೇರಿ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ಸುಮಾರು 8 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದರು.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ(ಕೆಎಸ್‍ಡಿಎಲ್) ಕೆಲ ನೌಕರರಿಂದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿ ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಈ ಸಂಬಂಧ ದಾಳಿ ನಡೆಸಲಾಗಿತ್ತು. ಮಾಡಾಳ್ ಅವರ ಪುತ್ರ ಬೆಂಗಳೂರು ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದ ಪ್ರಶಾಂತ್ ಮಾಡಾಳ್ ಅವರು ತಂದೆಯ ಪರವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಬಳಿಕ ಶಾಸಕ ಕಚೇರಿ ಮತ್ತು ಮನೆಯಲ್ಲಿ 8 ಕೋಟಿ ರೂಪಾಯಿ ಹೆಚ್ಚು ನಗದು ಪತ್ತೆಯಾಗಿತ್ತು.

ಈ ಸಂಬಂಧ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಸೇರಿ ಅವರ ಪುತ್ರ ಹಾಗೂ ಇತರರನ್ನು ಬಂಧಿಸಿ ತನಿಖೆ ಕೈಗೊಂಡಿದ್ದರು. ನಂತರ ಜಾಮೀನಿನ ಮೇಲೆ ಇತ್ತೀಚೆಗೆ ಮಾಡಾಳ್ ವಿರೂಪಾಕ್ಷಪ್ಪ ಅವರು ಬಿಡುಗಡೆಯಾಗಿದ್ದರು.

ನಾನು ಅಡಿಕೆ ವ್ಯಾಪಾರಿಯಾಗಿದ್ದು, ವರ್ತಕರು ನನಗೆ ತಂದುಕೊಟ್ಟಿದ್ದ ಹಣವನ್ನು ಅಲ್ಲಿ ಇರಿಸಿದ್ದೆ ಎಂದು ಕೆಲ ದಾಖಲೆಗಳನ್ನು ನೀಡಿದ್ದರು. ಲೋಕಾಯುಕ್ತ ತನಿಖೆಯ ವಿರುದ್ಧವೂ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠವು, ಸ್ಪೀಕರ್ ಅನುಮತಿ ಪಡೆಯದೆ ಶಾಸಕರನ್ನು ಬಂಧಿಸಿದ್ದು ಮತ್ತು ತನಿಖೆ ಕೈಗೊಳ್ಳಲಾಗಿದೆ ಎಂದು ತಾಂತ್ರಿಕ ಕಾರಣವೊಡ್ಡಿ ಪ್ರಕರಣವನ್ನು ರದ್ದುಗೊಳಿಸಿದೆ. ಇದರಿಂದಾಗಿ ಮಾಡಾಳ್ ವಿರೂಪಾಕ್ಷಪ್ಪ ಅವರು ನಿರಾಳರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News