ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ | ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲ್ ವಿರುದ್ಧದ ಎಫ್‌ಐಆರ್ ರದ್ದುಪಡಿಸಿದ ಹೈಕೋರ್ಟ್
Update: 2024-12-03 09:51 GMT
ಬೆಂಗಳೂರು : ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯ(ಈಡಿ)ವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್ ನಗರ ಠಾಣೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ, ನಳಿನ್ ಕುಮಾರ್ ಕಟೀಲ್ ಸಹಿತ ಮತ್ತಿತರರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ಆದೇಶದಿಂದಾಗಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ, ಮಾಜಿ ಸಂಸದ ಹಾಗೂ ಬಿಜೆಪಿಯ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಿರಾಳರಾಗಿದ್ದಾರೆ.
ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ 4ನೇ ಆರೋಪಿಯಾದ ನಳಿನ್ ಕುಮಾರ್ ಕಟೀಲ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.