ವಂಚನೆ ಪ್ರಕರಣ | ಪ್ರಹ್ಲಾದ್‌ ಜೋಶಿ ಸಹೋದರ ತಲೆಮರೆಸಿಕೊಂಡಿದ್ದು, ತನಿಖೆ ಮುಂದುವರಿದಿದೆ : ಜಿ.ಪರಮೇಶ್ವರ್‌

Update: 2024-10-18 07:24 GMT

ಬೆಂಗಳೂರು : "ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಸಹೋದರನ ವಿರುದ್ಧ ದೂರು ಬಂದಿದೆ. ದೂರು ಬಂದಾಗ ಗಂಭೀರವಾಗಿ ತೆಗೆದುಕೊಳ್ಳಬೇಕಲ್ಲವೇ? ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಗೋಪಾಲ್ ಜೋಶಿ ಎಂಬುವರು ತಲೆಮರೆಸಿಕೊಂಡಿದ್ದು, ತನಿಖೆ ಮುಂದುವರಿದಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ" ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ‌ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ ಅವರ ಪಾತ್ರ ಇರುವುದು ನನಗೆ ಗೊತ್ತಿಲ್ಲ. ಬಂಧಿತರನ್ನು ವಿಚಾರಣೆ ನಡೆಸಿ, ಹೇಳಿಕೆ ಪಡೆದಾಗ ಯಾರಿದ್ದಾರೆ ಎಂಬುದು ಗೊತ್ತಾಗುತ್ತದೆ. ತನಿಖೆಗೆ ಮೊದಲು ಹೇಳುವುದು ಸರಿಯಲ್ಲ. ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ವರದಿ ಬಾರದೆ ಏನು ಹೇಳಲು ಆಗುವುದಿಲ್ಲ" ಎಂದು ಸ್ಪಷ್ಟಪಡಿಸಿದರು.

ಜಾತಿಗಣತಿ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ʼಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಅವರನ್ನು ಯಾವ ವಿಚಾರಕ್ಕೆ ಭೇಟಿ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಸರ್ಕಾರವು 160 ಕೋಟಿ ರೂ. ಖರ್ಚು ಮಾಡಿ ಜಾತಿಗಣತಿ ಸಮೀಕ್ಷೆ ನಡೆಸಿದೆ. ಅಷ್ಟೊಂದು ಹಣ ಖರ್ಚು ಮಾಡಿದ ಮೇಲೆ ಜನಗಳಿಗೆ ಗೊತ್ತಾಗಬೇಕಲ್ಲವೇ? ಮುಂದೆ ಏನು ಮಾಡುತ್ತೇವೆ ಎಂಬುದು. ಯಾವ ಸಮುದಾಯಗಳು ಎಷ್ಟೆಷ್ಟು ಸಂಖ್ಯೆಯಲ್ಲಿದ್ದಾರೆ ಎಂದು ಜನಸಮುದಾಯಕ್ಕೆ ತಿಳಿಸುವ ವರದಿಯನ್ನು ಸಚಿವ ಸಂಪುಟದ ಮುಂದೆ ತರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ‌. ಯಾವುದೇ ವಿಚಾರವನ್ನು ನೂರಕ್ಕೆ ನೂರರಷ್ಟು ಜನ ಒಪ್ಪಿಕೊಳ್ಳುವುದಿಲ್ಲ. ಪರ-ವಿರೋಧ ಇದ್ದೇ ಇರುತ್ತಾರೆʼ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News