ʼಹನಿಟ್ರ್ಯಾಪ್ʼ ಬಗ್ಗೆ ಸಚಿವರು ದೂರು ಕೊಟ್ಟರೆ, ತ್ವರಿತವಾಗಿ ತನಿಖೆ ಆರಂಭ: ಡಾ.ಜಿ.ಪರಮೇಶ್ವರ್

ಡಾ.ಜಿ.ಪರಮೇಶ್ವರ್
ಬೆಂಗಳೂರು: ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಸಚಿವ ಕೆ.ಎನ್.ರಾಜಣ್ಣ ದೂರು ಕೊಟ್ಟರೆ, ತ್ವರಿತವಾಗಿಯೇ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಆರೋಪಗಳಿಗೆ ಸಂಬಂಧಿಸಿದಂತೆ ಖುದ್ದು ರಾಜಣ್ಣ ಅವರೇ ದೂರು ಕೊಡುವುದಾಗಿ ಹೇಳಿದ್ದಾರೆ. ಆದರೆ, ಇದುವರೆಗೆ ಯಾವುದೇ ಕಾನೂನು ಪ್ರಕ್ರಿಯೆ ನಡೆದಿಲ್ಲ. ಒಂದು ವೇಳೆ ದೂರು ಸಲ್ಲಿಸಿದರೆ ತನಿಖೆ ಆರಂಭಗೊಳ್ಳಲಿದೆ. ಈಗಾಗಲೇ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.
ಹನಿಟ್ರ್ಯಾಪ್ ಕುರಿತು ಇಷ್ಟು ದೊಡ್ಡ ಆರೋಪ ಬಂದಿದೆ. ಹಾಗಾಗಿ, ಸರಕಾರ ಗಂಭೀರವಾಗಿ ತೆಗೆದುಕೊಳ್ಳಲಿದೆ. ಆದರೆ, ಬಿಜೆಪಿ ನಾಯಕರು ಸಿಬಿಐ, ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಜತೆಗೆ, ರಾಜ್ಯ ಸರಕಾರದ ಸಂಸ್ಥೆಗಳಿಂದಲೂ ತನಿಖೆ ನಡೆಸಲಾಗುವುದು ಎಂದು ಹೇಳಿದರು.